ತುಮಕೂರು: ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿ ಹರಡುತ್ತಿರುವ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕರು ಪಾಲಿಕೆಯೊಂದಿಗೆ ಕೈಜೋಡಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ಮನವಿ ಮಾಡಿದ್ದಾರೆ.
ಘನತ್ಯಾಜ್ಯ ವಿಲೇವಾರಿ :
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೇ ಪ್ರತಿನಿತ್ಯ ಸಮರ್ಪಕವಾಗಿ ಘನತ್ಯಾಜ್ಯ ವಿಲೇವಾರಿ ಮತ್ತು ಚರಂಡಿ ಸ್ವಚ್ಚತಾ ಕಾರ್ಯ ನಡೆಯುತ್ತಿದೆ. ಎಲ್ಲಾ ವರ್ಗದ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿಯುವಂತೆ ವ್ಯವಸ್ಥೆ ಮಾಡಲಾಗುತ್ತಿದೆ. ಘನತ್ಯಾಜ್ಯ ವಿಲೇವಾರಿ ಮತ್ತು ನಿಂತ ನೀರಿನ ತಾಣ, ತಗ್ಗು ಪ್ರದೇಶ, ಕೊಳಚೆ ಪ್ರದೇಶಗಳಲ್ಲಿ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಕೊಳಚೆ ಪ್ರದೇಶಗಳಲ್ಲಿ ಹೆಚ್ಚಿನ ಗಮನಹರಿಸಿ, ಕೀಟನಾಶಕ ಔಷಧಿಗಳನ್ನು ಸಿಂಪಡಿಸಿ, ಕಡ್ಡಾಯವಾಗಿ ಕಾಲಕಾಲಕ್ಕೆ ಫಾಗಿಂಗ್ ಕಾರ್ಯವನ್ನು ನಿರ್ವಹಿಸಲಾಗುತ್ತಿದೆ.
ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮ :
ಆಟೋ ಟಿಪ್ಪರ್ ವಾಹನಗಳಲ್ಲಿ ಧ್ವನಿವರ್ಧಕಗಳ ಮೂಲಕ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ಮತ್ತು ಇತರೆ ಸಾಂಕ್ರಾಮಿಕ ರೋಗಗಳ ಬಗ್ಗೆ ಪ್ರಚಾರ ಮಾಡಿಸುವ ಮೂಲಕ ಡೆಂಗ್ಯೂ ಮತ್ತು ಚಿಕನ್ ಗುನ್ಯಾ ರೋಗಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕ್ರಮವಹಿಸಲಾಗುತ್ತಿದೆ.
ಸಾರ್ವಜನಿಕರಲ್ಲಿ ಮನವಿ :
ನಗರದ ಸಾರ್ವಜನಿಕರು, ವಾಣಿಜ್ಯ ಉದ್ದಿಮೆದಾರರು, ಶಾಲಾ-ಕಾಲೇಜಿನ ಆಡಳಿತ ಮಂಡಳಿಯವರು ತಮ್ಮ ಪ್ರದೇಶದ ಸುತ್ತ-ಮುತ್ತಲಿನ ಆವರಣಗಳಲ್ಲಿ ಸಿಮೆಂಟ್ ತೊಟ್ಟಿ, ಬ್ಯಾರೆಲ್, ಡ್ರಂ, ಬಕೆಟ್, ಏರ್ ಕೂಲರ್, ಕೊಡಗಳಲ್ಲಿ ನೀರನ್ನು ಶೇಖರಿಸಿದ್ದಲ್ಲಿ ವಾರಕ್ಕೊಮ್ಮೆಯಾದರೂ ಅದನ್ನು ಖಾಲಿ ಮಾಡಿ, ಒಣಗಿಸಿ ಮತ್ತೆ ಭರ್ತಿ ಮಾಡಿ ಸಂಪೂರ್ಣವಾಗಿ ಮುಚ್ಚಿಡತಕ್ಕದ್ದು. ಒಳಾಂಗಣ ಮತ್ತು ಹೊರಾಂಗಣದಲ್ಲಿ ನೀರನ್ನು ಸಂಗ್ರಹಿಸಬಹುದಾದ ಎಲ್ಲಾ ಖeಛಿeಠಿಣಚಿಛಿಟe ಗಳನ್ನು ನಿಯಮಿತವಾಗಿ ಖಾಲಿ ಮಾಡಿ ಸ್ವಚ್ಛಗೊಳಿಸಬೇಕು. ಬಯಲಿನಲ್ಲಿರುವ ತ್ಯಾಜ್ಯ ವಸ್ತುಗಳಾದ ಒಡೆದ ಬಾಟಲಿ, ಟಿನ್, ಉಪಯೋಗಿಸಿ ಬಿಸಾಡಿದ ಟೈರ್ ಹಾಗೂ ತೆಂಗಿನಚಿಪ್ಪುಗಳಲ್ಲಿ ಮಳೆನೀರು ಶೇಖರಣೆಯಾಗದಂತೆ ಎಚ್ಚರ ವಹಿಸಿ ಅದನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಬೇಕು. ಇಲ್ಲವಾದಲ್ಲಿ ನಿಂತ ನೀರಿನ ತಾಣಗಳಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ಹೆಚ್ಚುವ ಸಂಭವವಿರುವುದರಿಂದ ಸಾರ್ವಜನಿಕರು ಪಾಲಿಕೆ ವ್ಯಾಪ್ತಿಯಲ್ಲಿ ನೈರ್ಮಲ್ಯತೆ ಕಾಪಾಡಲು ಸಹಕರಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
ಲಾರ್ವ ಸಮೀಕ್ಷೆ ಕಾರ್ಯ
ಲಾರ್ವಾ ತಡೆಗಟ್ಟುವ ನಿಟ್ಟಿನಲ್ಲಿ ಮಹಾನಗರಪಾಲಿಕೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡೆಂಗ್ಯೂ ಹಾಗೂ ಚಿಕನ್‌ಗುನ್ಯಾದಂತಹ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕಾಗಿ ಪ್ರತಿ ಮಾಹೆಯ 1 ಮತ್ತು 3ನೇ ಶುಕ್ರವಾರಗಳಂದು ಪಾಲಿಕೆ ವ್ಯಾಪ್ತಿಯ 35 ವಾರ್ಡ್ಗಳ ಮನೆ-ಮನೆಗೆ ತೆರಳಿ ಲಾರ್ವ ಸಮೀಕ್ಷೆ ಕಾರ್ಯವನ್ನು ನಡೆಸಲಾಗುತ್ತಿದೆ. ನಗರ ವ್ಯಾಪ್ತಿಯಲ್ಲಿ ಡೆಂಗ್ಯೂ, ಚಿಕನ್‌ಗುನ್ಯಾ, ಮಲೇರಿಯಾ ಮತ್ತು ಇತರೆ ಸಾಂಕ್ರಾಮಿಕ ರೋಗಗಳಿಂದಾಗುವ ಅನಾಹುತವನ್ನು ತಡೆಯಲು ಸಹಕರಿಸಬೇಕಾಗಿ ನಾಗರಿಕರಲ್ಲಿ ಅವರು ಮನವಿ ಮಾಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW