ತುಮಕೂರು: ಕೃಷಿ ಇಲಾಖೆಯು ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ–2025ರ ಪ್ರಯುಕ್ತ ಡಿಸೆಂಬರ್ 31ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ಮತ್ತು ಮರೆತು ಹೋದ ಖಾದ್ಯಗಳ ಪಾಕ ಸ್ಪರ್ಧೆಯನ್ನು ಏರ್ಪಡಿಸಿದ್ದು, ಸ್ಪರ್ಧೆಯಲ್ಲಿ ಭಾಗವಹಿಸಲಿಚ್ಛಿಸುವವರಿಂದ ಅರ್ಜಿ ಆಹ್ವಾನಿಸಿದೆ.
ಈ ಸ್ಪರ್ಧೆಯಲ್ಲಿ ಕೃಷಿ ಇಲಾಖೆ ಅಧಿಕಾರಿ/ಸಿಬ್ಬಂದಿ, ವಿದ್ಯಾರ್ಥಿಗಳನ್ನು ಹೊರತುಪಡಿಸಿ ಸಾರ್ವಜನಿಕರು ಭಾಗವಹಿಸಬಹುದಾಗಿದ್ದು, ಭಾಗವಹಿಸುವವರು ತಮ್ಮ ಅರ್ಜಿಯಲ್ಲಿ ಹೆಸರು, ವಿಳಾಸ ಮತ್ತು ತಯಾರಿಸುವ ಖಾದ್ಯದ ಬಗ್ಗೆ ಮಾಹಿತಿ ನೀಡಬೇಕು. ಅರ್ಜಿ ನಮೂದಿಸಿದ ತಿನಿಸನ್ನು ಮನೆಯಲ್ಲಿಯೇ ತಯಾರಿಸಿ ಡಿಸೆಂಬರ್ 31ರಂದು ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರದರ್ಶಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ಪ್ರತಿ ಸ್ಪರ್ಧಿಗೆ ಒಂದೇ ಸಸ್ಯಹಾರಿ ತಿನಿಸು (ಸಿಹಿ ಅಥವಾ ಖಾರ ಅಥವಾ ಮರೆತು ಹೋದ ಖಾದ್ಯ) ಪ್ರದರ್ಶಿಸಲು ಅವಕಾಶವಿರುತ್ತದೆ.
ಸ್ಪರ್ಧೆಯಲ್ಲಿ ಆಯ್ಕೆಯಾದವರಿಗೆ ಸಿಹಿ, ಖಾರ (ಸಿರಿಧಾನ್ಯ ಖಾದ್ಯಗಳಿಗೆ ಮಾತ್ರ) ಮತ್ತು ಮರೆತು ಹೋದ ಖಾದ್ಯಗಳ ತಿನಿಸಿಗೆ ಜಿಲ್ಲಾ ಮಟ್ಟದಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನವಾಗಿ ತಲಾ 5,000ರೂ., 3,000ರೂ. ಹಾಗೂ 2,000ರೂ.ಗಳನ್ನು ನೀಡಲಾಗುವುದು.
ಆಸಕ್ತರು ಸ್ವವಿವರದೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 28ರ ಸಂಜೆ 5 ಗಂಟೆಯೊಳಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೋರ್ಟ್ ಆವರಣ, ಚರ್ಚ್ ಸರ್ಕಲ್ ಹತ್ತಿರ, ತುಮಕೂರು-572101 ಇವರಿಗೆ ಸಲ್ಲಿಸಬೇಕು. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.8431050389/8197156272ನ್ನು ಸಂಪರ್ಕಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ್ ಕಳ್ಳಣ್ಣನವರ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


