ಬೀದರ್: ಜಿಲ್ಲೆಯ ಔರಾದ್ (ಬಿ) ಮತ್ತು ಕಮಲನಗರ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಸಬೇಕು. ನೀರು ಪೂರೈಕೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಔರಾದ್ ಶಾಸಕ ಪ್ರಭು ಬಿ.ಚವ್ಹಾಣ ಎಚ್ಚರಿಕೆ ನೀಡಿದರು.
ಔರಾದ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನ.2ರಂದು ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು
“ಈ ವರ್ಷ ಸರಾಸರಿಗಿಂತ ಕಡಿಮೆ ಮಳೆಯಾಗಿರುವುದರಿಂದ ಬರ ಪರಿಸ್ಥಿತಿ ಎದುರಾಗಿದೆ. ಬೇಸಿಗೆ ಆರಂಭಕ್ಕೂ ಮುನ್ನವೇ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದ್ದು, ಜನರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಸಮಸ್ಯೆಗೆ ತಕ್ಷಣ ಸ್ಪಂದಿಸಬೇಕು. ನೀರಿನ ಸಮಸ್ಯೆ ತೀವ್ರವಾಗಿರುವ ಗ್ರಾಮಗಳಿಗೆ ಟ್ಯಾಂಕರ್ ಅಥವಾ ಪರ್ಯಾಯ ವ್ಯವಸ್ಥೆಯ ಮೂಲಕ ನೀರು ಪೂರೈಸಬೇಕು” ಎಂದು ಸೂಚಿಸಿದರು.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೆ ಭೇಟಿ ನೀಡಿ ಕುಡಿಯುವ ನೀರಿನ ಪರಿಸ್ಥಿತಿ ಪರಿಶೀಲಿಸಬೇಕು. ಮೊಬೈಲ್ ಫೋನ್ಗಳನ್ನು ಸದಾ ಚಾಲ್ತಿಯಲ್ಲಿಟ್ಟುಕೊಂಡು ಸಾರ್ವಜನಿಕರ ಕರೆಗಳಿಗೆ ಸ್ಪಂದಿಸಬೇಕು. ಮೊಬೈಲ್ ಸ್ವಿಚ್ ಆಫ್ ಮಾಡುವುದು, ಸಾರ್ವಜನಿಕರೊಂದಿಗೆ ಅಗೌರವದಿಂದ ಅಥವಾ ಅಸಭ್ಯವಾಗಿ ವರ್ತಿಸುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದರು.
ನೀರಿನ ಮೂಲಗಳ ಕೊರತೆ ಇರುವ ಹಾಗೂ ಸಮಸ್ಯೆ ತೀವ್ರವಾಗಿರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು. ಲಭ್ಯವಿರುವ ಜಲಮೂಲಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಮೋಟಾರ್ ಕೆಟ್ಟಿದೆ, ವಾಟರ್ ಮನ್ ಕೆಲಸ ಮಾಡುತ್ತಿಲ್ಲ, ವಿದ್ಯುತ್ ತಂತಿ ಹಾಳಾಗಿದೆ ಎಂಬ ಸಣ್ಣಪುಟ್ಟ ಕಾರಣಗಳನ್ನು ನೀಡಿ ನೀರು ಪೂರೈಕೆ ಸ್ಥಗಿತಗೊಳಿಸುವುದನ್ನು ಸಹಿಸುವುದಿಲ್ಲ. ಇಂತಹ ನಿರ್ಲಕ್ಷ್ಯ ಕಂಡುಬಂದಲ್ಲಿ ಸಂಬಂಧಿಸಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಗ್ರಾಮ ಪಂಚಾಯಿತಿವಾರು ಕುಡಿಯುವ ನೀರಿನ ಸಮಸ್ಯೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದ ಶಾಸಕರು, ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳಲ್ಲಿ ಈವರೆಗೆ ಕೈಗೊಂಡಿರುವ ಕ್ರಮಗಳು ಹಾಗೂ ಮುಂದಿನ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಸಭೆಯಲ್ಲಿ ಔರಾದ್ ತಹಶೀಲ್ದಾರ ಮಹೇಶ ಪಾಟೀಲ, ಕಮಲನಗರ ಅಮಿತಕುಮಾರ ಕುಲಕರ್ಣಿ, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕಿರಣ ಪಾಟೀಲ, ಹಣಮಂತರಾಯ ಕೌಟಗೆ, ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಸೇರಿದಂತೆ ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.
ಸಹಾಯವಾಣಿ ಆರಂಭ
ಔರಾದ್ (ಬಿ) ಮತ್ತು ಕಮಲನಗರ ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಸಾರ್ವಜನಿಕರು ಶಾಸಕರ ಕಚೇರಿಯಲ್ಲಿ ಆರಂಭಿಸಿರುವ ಸಹಾಯವಾಣಿ ( 9108708774 / 7090157920) ಕೇಂದ್ರಕ್ಕೆ ಕರೆ ಮಾಡಿ ದೂರು ಸಲ್ಲಿಸಬಹುದು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
