ಔರಾದ್ (ಬೀದರ್): ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ತಾಲೂಕಿನ ಯಾವುದೇ ಗ್ರಾಮದಲ್ಲೂ ಕಲುಷಿತ ನೀರು ಸರಬರಾಜು ಆಗದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ (ಇಒ) ಕಿರಣ ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮಗಳಲ್ಲಿನ ಕುಡಿಯುವ ನೀರಿನ ಮೂಲಗಳನ್ನು ನಿರಂತರವಾಗಿ ಪರಿಶೀಲಿಸಿ, ಸಾರ್ವಜನಿಕರಿಗೆ ಯಾವುದೇ ರೀತಿಯ ಕುಡಿಯುವ ನೀರಿನ ಅಭಾವ ಅಥವಾ ತೊಂದರೆಯಾಗದಂತೆ ಆದ್ಯತೆ ನೀಡಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿ ಕಡ್ಡಾಯವಾಗಿ ತಮ್ಮ ಕೇಂದ್ರ ಸ್ಥಾನದಲ್ಲಿದ್ದುಕೊಂಡು ಗ್ರಾಮಗಳ ಪರಿಸ್ಥಿತಿಯ ಮೇಲೆ ನಿರಂತರ ಮೇಲ್ವಿಚಾರಣೆ ನಡೆಸಬೇಕು. ಮಳೆಗಾಲದಲ್ಲಿ ಸಾಂಕ್ರಾಮಿಕ ರೋಗಗಳು ಉಲ್ಬಣಗೊಳ್ಳದಂತೆ ಆರೋಗ್ಯ ಇಲಾಖೆಯೊಂದಿಗೆ ಸೂಕ್ತ ಸಮನ್ವಯ ಸಾಧಿಸಿ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಗ್ರಾಮೀಣ ಉದ್ಯೋಗ ಯೋಜನೆಯ ಸಹಾಯಕ ನಿರ್ದೇಶಕ ಶಿವಕುಮಾರ ಘಾಟೆ ಮಾತನಾಡಿ, “ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗಾಗಿ ಲಭ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಿ, ಕೈಗೆತ್ತಿಕೊಳ್ಳುವ ಪ್ರತಿಯೊಂದು ಕಾಮಗಾರಿಯನ್ನು ಗುಣಮಟ್ಟದಿಂದ ಅನುಷ್ಠಾನಗೊಳಿಸಬೇಕು” ಎಂದು ನಿರ್ದೇಶನ ನೀಡಿದರು.
ಈ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಂತ್ರಿಕ ಸಂಯೋಜಕ ಆನಂದ ಕಾಳಗಾಪೂರೆ, ತಾಲೂಕು ಪಂಚಾಯತ್ ವ್ಯವಸ್ಥಾಪಕ ಸಂಜುಕುಮಾರ್, ತಾಲೂಕಿನ ವಿವಿಧ ಗ್ರಾಮ ಪಂಚಾಯತಿಗಳ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ), ತಾಂತ್ರಿಕ ಸಹಾಯಕರು, ಡಿಇಒಗಳು, ಐಇಸಿ ಸಂಯೋಜಕರು ಹಾಗೂ ತಾಪಂ ಸಿಬ್ಬಂದಿ ಭಾಗವಹಿಸಿದ್ದರು.
ವರದಿ: ಅರವಿಂದ ಮಲ್ಲೀಗೆ, ಬೀದರ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
