ಬೀದರ್: ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳನ್ನು ನಡೆಯದಂತೆ ಅಧಿಕಾರಿಗಳು ನೋಡಿಕೊಳ್ಳಬೇಕು ಮತ್ತು ಬಾಲ್ಯ ವಿವಾಹ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಜಿಲ್ಲಾ ಮಕ್ಕಳ ಕಲ್ಯಾಣ ಮತ್ತು ರಕ್ಷಣಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ʼಬಾಲ್ಯ ವಿವಾಹ ಮಾಡುವ ಪಾಲಕರ ವಿರುದ್ಧ ಪೋಕ್ಷೊ ಪ್ರಕರಣ ದಾಖಲಿಸಬೇಕೆಂಬ ನಿಯಮವಿದ್ದು, ಅದನ್ನು ಮಾಡಿದಾಗ ಬಾಲ್ಯ ವಿವಾಹ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತವೆʼ ಎಂದರು.
ʼಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮದುವೆ ನಡೆಯುವ ಕಲ್ಯಾಣ ಮಂಟಪ ಹಾಗೂ ಸಾಮೂಹಿಕ ವಿವಾಹ ನಡೆಯುವ ಸ್ಥಳಗಳ ಮೇಲೆ ಅಧಿಕಾರಿಗಳು ಗಮನಹರಿಸಬೇಕು. ಅಧಿಕಾರಿಗಳು ಕಾಟಾಚಾರಕ್ಕೆ ಕೆಲಸ ಮಾಡದೇ ಜವಾಬ್ದಾರಿಯಿಂದ ಮಾಡಿದರೆ ಮಾತ್ರ ಬಾಲ್ಯ ವಿವಾಹ ಸೇರಿದಂತೆ ಇತರೆ ಹಲವಾರು ಸಾಮಾಜಿಕ ಪಿಡುಗುಗಳನ್ನು ನಿರ್ಮೂಲನೆ ಮಾಡಬಹುದುʼ ಎಂದು ಹೇಳಿದರು.
ʼಮಕ್ಕಳ ಪಾಲನಾ ಸಂಸ್ಥೆಗಳು ಕಡ್ಡಾಯವಾಗಿ ಸರಕಾರದಿಂದ ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಬೇಕು. ತಾಲೂಕು ಮಟ್ಟದಲ್ಲಿ ತಹಶೀಲ್ದಾರರು ಮಕ್ಕಳ ರಕ್ಷಣಾ ಸಮಿತಿಗಳನ್ನು ರಚಿಸಿ, ಆಗಾಗ ಸಭೆ ನಡೆಸಿ ಮಾಹಿತಿ ಪಡೆಯಬೇಕುʼ ಎಂದು ತಹಶಿಲ್ದಾರರಿಗೆ ಸೂಚಿಸಿದರು.
ಜಿಲ್ಲೆಯಲ್ಲಿ 49 ಬಾಲ ಗರ್ಭಿಣಿ ಪ್ರಕರಣ:
ʼಹೋಟೆಲ್, ಗ್ಯಾರೇಜ್ ಹಾಗೂ ಫ್ಯಾಕ್ಟರಿಗಳಲ್ಲಿ ಬಾಲ ಕಾರ್ಮಿಕ ಮಕ್ಕಳು ಕಂಡು ಬಂದರೆ ಕಾರ್ಮಿಕ ಇಲಾಖೆಯ ಅಧಿಕಾರಿಗಳು ತಕ್ಷಣ ಕ್ರಮ ವಹಿಸಬೇಕು. ಬಾಲಕರನ್ನು ಯಾರೂ ದುಡಿಮೆಗೆ ಹಚ್ಚಬಾರದು. ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ದಾಖಲಾದ 49 ಬಾಲ ಗರ್ಭಿಣಿ ಪ್ರಕರಣಗಳ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಹೆಚ್ಚಿನ ಗಮನ ಹರಿಸುವುದರ ಜೊತೆಗೆ ಇಂತಹ ಪ್ರಕರಣಗಳು ನಡೆಯದಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.
ಪ್ರೌಢ ಶಾಲೆ ಮತ್ತು ಪಿಯುಸಿ ತರಗತಿಯಲ್ಲಿ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಕುರಿತು ಮಾಹಿತಿ ಸಂಗ್ರಹಿಸಬೇಕು. ಶಾಲಾ-ಕಾಲೇಜುಗಳಲ್ಲಿ ಮಕ್ಕಳ ಸಹಾಯವಾಣಿ ನಾಮಫಲಕ ಹಾಕುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಸಾಂತ್ವನ ಕೇಂದ್ರಗಳಲ್ಲಿರುವ ಮಕ್ಕಳಿಗೆ ಜಿಲ್ಲಾ ವಿಜ್ಞಾನ ಕೇಂದ್ರಕ್ಕೆ ಭೇಟಿ ಮಾಡಿಸಿ ಮತ್ತು ಕ್ರೀಡಾ ಇಲಾಖೆಯಿಂದ ಆ ಮಕ್ಕಳಿಗೆ ಕ್ರೀಡಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜಿಲ್ಲಾ ಆಸ್ಪತ್ರೆಯಲ್ಲಿ ಜನರಿಗೆ ಶುದ್ಧ ನೀರು ಕುಡಿಯಲು ಆರ್ಒ ಪ್ಲಾಂಟ್ ಇಲ್ಲ ಎಂಬ ದೂರಿದೆ, ಅದನ್ನು ಸರಿಪಡಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಮಾತನಾಡಿ, ʼಮಕ್ಕಳ ಹಕ್ಕುಗಳು ಹಾಗೂ ಅರಿವಿನ ಕುರಿತು ಹಲವಾರು ಜನಜಾಗೃತಿ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಬೇಕು. ಈ ಕಾರ್ಯಕ್ರಮಗಳು ಬೀದರ ನಗರದಲ್ಲಿ ಅಷ್ಟೇ ಅಲ್ಲದೇ ತಾಲೂಕಿನಲ್ಲಿ ಸಹ ತಾಲೂಕು ಮಟ್ಟದ ಅಧಿಕಾರಿಗಳು ಆಯೋಜಿಸಬೇಕುʼ ಎಂದು ಹೇಳಿದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296