ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಛಾಪು ಮೂಡಿಸಿದ್ದ ನಿವೃತ್ತ ಪೊಲೀಸ್ ಮಹಾನಿರ್ದೇಶಕರಾದ ಬಿ.ಎನ್. ಗರುಡಾಚಾರ್ (96) ಇಂದು ಮುಂಜಾನೆ ನಿಧನರಾಗಿದ್ದಾರೆ.
ಬಸವನಗುಡಿಯ ಕೃಷ್ಣ ರಸ್ತೆಯಲ್ಲಿರುವ ಪೋಸ್ಟ್ ಆಫೀಸ್ ಹಿಂಭಾಗದ ಅವರ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ನಾಳೆ ಅವರ ಅಂತ್ಯ ಸಂಸ್ಕಾರ ವಿಲ್ಸನ್ಗಾರ್ಡನ್ನ ರುದ್ರಭೂಮಿಯಲ್ಲಿ ನಡೆಯಲಿದೆ ಎಂದು ತಿಳಿದು ಬಂದಿದೆ.
ಬಿ.ಎನ್.ಗರುಡಾಚಾರ್ ಅವರು ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಂಡಿಗನವಿಲೆ ಗ್ರಾಮದವರು. ಇವರು 1976 ರಿಂದ 1980ರ ವರೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು.
ಬೆಂಗಳೂರು ಸಂಚಾರ ವಿಭಾಗದ ಡಿಸಿಪಿ ಆಗಿದ್ದ ಬಿ.ಎನ್ ಗರುಡಾಚಾರ್ ಅವರು, ಎನ್.ಆರ್. ಜಂಕ್ಷನ್ (ಎಲ್ ಐಸಿ ಕಚೇರಿ ಬಳಿ)ನಲ್ಲಿ ಸಂಚಾರ ದಟ್ಟಣೆ ಹೆಚ್ಚಿದ್ದ ಕಾರಣಕ್ಕೆ ಸಿಗ್ನಲ್ ಅಳವಡಿಸಿದ್ದರು. ಇದು ಬೆಂಗಳೂರಿನ ಮೊದಲ ಟ್ರಾಫಿಕ್ ಸಿಗ್ನಲ್ ಆಗಿದೆ.
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸ್ ಪಿಯಾಗಿ ಸೇವೆ ಸಲ್ಲಿಸಿದ್ದ ಅವರು, ನಂತರ ಬೆಂಗಳೂರು ನಗರ ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದು, ರಾಜ್ಯದ ಡಿಜಿ ಮತ್ತು ಐಜಿಪಿಯಾಗಿ ಉತ್ತಮ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4