ಸರಣಿ ಅಪಘಾತದಲ್ಲಿ ಆಟೋ ಚಾಲಕರೊಬ್ಬರು ಮೃತಪಟ್ಟಿರುವ ಘಟನೆ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಶ್ರೀಗಂಧಕಾವಲು ನಿವಾಸಿ ಗಿರಿಸಾಗರ್(43) ಮೃತಪಟ್ಟ ಆಟೋ ಚಾಲಕ.
ಇಂದು ಬೆಳಗ್ಗೆ 6.30ರ ಸುಮಾರಿನಲ್ಲಿ ಮೈಸೂರು ರಸ್ತೆಯ ಸ್ಯಾಟ್ಲೈಟ್ ಬಸ್ ನಿಲ್ದಾಣದ ಹೊರದ್ವಾರದ ಬಳಿ ಹೊಸಗುಡ್ಡದಹಳ್ಳಿ ಜಂಕ್ಷನ್ನಿಂದ ಬಾಪೂಜಿನಗರದ ಕಡೆಗೆ ಈಚರ್ ವಾಹನ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಮುಂದೆ ಹೋಗುತ್ತಿದ್ದ ಕ್ಯಾಂಟರ್ಗೆ ಡಿಕ್ಕಿ ಹೊಡೆದಿದೆ.
ಈ ಕ್ಯಾಂಟರ್ ಆಟೋಗೆ ಡಿಕ್ಕಿ ಹೊಡೆದಿದೆ. ಆಟೋ ಬಿಎಂಟಿಸಿ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಸರಣಿ ಅಪಘಾತ ಸಂಭವಿಸಿ ಕ್ಯಾಂಟರ್ ಹಾಗೂ ಬಿಎಂಟಿಸಿ ಬಸ್ ಮಧ್ಯೆ ಆಟೋ ಸಿಕ್ಕಿಕೊಂಡಿದೆ. ಡಿಕ್ಕಿಯ ರಭಸಕ್ಕೆ ಆಟೋ ಚಾಲಕ ಆಟೋದಲ್ಲಿ ಸಿಲುಕಿಕೊಂಡು ಗಂಭೀರ ಗಾಯಗೊಂಡರು.
ತಕ್ಷಣ ಸ್ಥಳೀಯರು ಅರ್ಧ ಗಂಟೆಗೂ ಹೆಚ್ಚು ಕಾಲ ಹರಸಾಹಸಪಟ್ಟು ಚಾಲಕನನ್ನು ರಕ್ಷಿಸಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆ ಬ್ಯಾಟರಾಯನಪುರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಅಪಘಾತಕ್ಕೊಳಗಾದ ನಾಲ್ಕು ವಾಹನಗಳು ಜಖಂಗೊಂಡಿದ್ದು, ಅವುಗಳನ್ನು ತೆರವುಗೊಳಿಸಲು ಹರಸಾಹಸಪಟ್ಟರು. ಸರಣಿ ಅಪಘಾತದಿಂದಾಗಿ ಮೈಸೂರು ರಸ್ತೆಯಲ್ಲಿ ಸುಮಾರು 3 ಕಿ.ಮೀವರೆಗೂ ಸಂಚಾರ ದಟ್ಟಣೆ ಉಂಟಾಯಿತು. ಪೊಲೀಸರು ಸಂಚಾರವನ್ನು ನಿಯಂತ್ರಣಕ್ಕೆ ತಂದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಬೆಳ್ಳಂ ಬೆಳಗ್ಗೆಯೇ ಸಂಭವಿಸಿದ ಸರಣಿ ಅಪಘಾತದಿಂದಾಗಿ ಕಚೇರಿಗೆ ಹೋಗುವವರು, ಶಾಲಾ-ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿಗಳು ಗಂಟಗಟ್ಟಲೇ ವಾಹನಗಳಲ್ಲಿಯೇ ಇರುವಂತಾಯಿತು. ಬ್ಯಾಟರಾಯನಪುರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


