ಗ್ರಾಮದ ಯುವಕನನ್ನು ಪ್ರೀತಿಸಿದ್ದಕ್ಕೆ 17 ವರ್ಷ ವಯಸ್ಸಿನ ಬಾಲಕಿಯನ್ನು ಆಕೆಯ ತಂದೆ ಹಾಗೂ ಸಹೋದರರು ಕೊಚ್ಚಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಮುಜಾಫರ್‌ಪುರದ ಥಿಕ್ರಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಯುವಕನೊಂದಿಗಿನ ಸಂಬಂಧವನ್ನು ಕೊನೆಗೊಳಿಸುವಂತೆ ಕುಟುಂಬವು ಬಾಲಕಿಗೆ ಎಚ್ಚರಿಕೆ ನೀಡಿತ್ತು. ಆದ್ರೆ, ಶನಿವಾರ ಬಾಲಕಿ ಫೋನ್ ನಲ್ಲಿ ಮಾತನಾಡುತ್ತಿರುವುದನ್ನು ಕಂಡು ಕೋಪಗೊಂಡ ಕುಟುಂಬಸ್ಥರು ಆಕೆಯನ್ನು ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಘಟನೆಯನ್ನು ಗಮನಿಸಿದ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


