ಹಾಸನ: ಕುರಿ ಮೇಯಿಸಲು ತೆರಳಿದ್ದ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿಯ ಚೌಡನಹಳ್ಳಿ ಗ್ರಾಮದ ಸಮೀಪ ನಡೆದಿದೆ. ಗ್ರಾಮದ ನಿವಾಸಿ ಜಯಮ್ಮ (45) ಮೃತ ದುರ್ದೈವಿ.
ಜಯಮ್ಮ ಎಂದಿನಂತೆ ಗ್ರಾಮದ ಸಮೀಪದ ತೋಟದಂಚಿನಲ್ಲಿ ಕುರಿ ಮೇಯಿಸುತ್ತಿದ್ದಾಗ ಏಕಾಏಕಿ ಎದುರಾದ ಕಾಡಾನೆ ದಾಳಿ ನಡೆಸಿದೆ. ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಕಳೆದ ಒಂದು ತಿಂಗಳಿನಿಂದ ಈ ಭಾಗದಲ್ಲಿ 20ಕ್ಕೂ ಹೆಚ್ಚು ಕಾಡಾನೆಗಳ ಹಿಂಡು ಬೀಡುಬಿಟ್ಟಿದ್ದು, ಕಾಫಿ, ಅಡಿಕೆ ಸೇರಿದಂತೆ ಅಪಾರ ಪ್ರಮಾಣದ ಬೆಳೆ ನಾಶಪಡಿಸುತ್ತಿವೆ. ಹಗಲಿನಲ್ಲೂ ಕೃಷಿ ಕೆಲಸಕ್ಕೆ ತೆರಳಲು ರೈತರು ಭಯಪಡುವಂತಾಗಿದೆ. ಆನೆ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ ಸೋಮವಾರ ಪ್ರತಿಭಟನೆ ನಡೆಸಲು ರೈತರು ನಿರ್ಧರಿಸಿದ್ದರು. ಆದರೆ, ಅದಕ್ಕೂ ಮುನ್ನವೇ ಅಮಾಯಕ ಜೀವವೊಂದು ಬಲಿಯಾಗಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಈ ಸಾವಿಗೆ ಕಾರಣ ಎಂದು ಆರೋಪಿಸಿರುವ ಸ್ಥಳೀಯರು, ಕೂಡಲೇ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಆನೆಗಳನ್ನು ಸ್ಥಳಾಂತರಿಸಬೇಕು ಹಾಗೂ ಮೃತ ಮಹಿಳೆಯ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಅರೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
