ಬೆಂಗಳೂರು: ರಾಜಧಾನಿಯಲ್ಲಿ ವಿಐಪಿ ಸಂಚಾರದ ಹೆಸರಿನಲ್ಲಿ ಸಾಮಾನ್ಯ ನಾಗರಿಕರಿಗೆ ಆಗುತ್ತಿರುವ ತೊಂದರೆಗೆ ಸಂಬಂಧಿಸಿದಂತೆ ಮತ್ತೊಂದು ಆಕ್ರೋಶದ ಘಟನೆ ಮುನ್ನೆಲೆಗೆ ಬಂದಿದೆ. ವಿಐಪಿ ಮೂವ್‌ಮೆಂಟ್ ಹಿನ್ನೆಲೆಯಲ್ಲಿ ಹೇರಲಾಗಿದ್ದ ಟ್ರಾಫಿಕ್ ನಿರ್ಬಂಧದಿಂದಾಗಿ ತನ್ನ ಗರ್ಭಿಣಿ ಪತ್ನಿ ಇದ್ದ ಕಾರು ರಸ್ತೆಯಲ್ಲೇ ಸಿಲುಕಿಕೊಂಡಿದ್ದನ್ನು ಪ್ರತಿಭಟಿಸಿ ವ್ಯಕ್ತಿಯೊಬ್ಬರು ನಡುರಸ್ತೆಯಲ್ಲೇ ಧರಣಿ ಕುಳಿತ ಘಟನೆ ಬೆಂಗಳೂರಿನ ಓಲ್ಡ್ ಏರ್‌ಪೋರ್ಟ್ ರಸ್ತೆಯಲ್ಲಿ ನಡೆದಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಘಟನೆ ಕುರಿತು ಪೊಲೀಸರು ತನಿಖೆಗೆ ಆದೇಶಿಸಿದ್ದಾರೆ.
ಭಾನುವಾರ ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರ ವಾಹನ ದಳದ ಸಂಚಾರದ ಹಿನ್ನೆಲೆಯಲ್ಲಿ ಪೊಲೀಸರು ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿದ್ದರು (ಝೀರೋ ಟ್ರಾಫಿಕ್). ಅಂಡರ್ ಪಾಸ್ ಕಾಮಗಾರಿಯಿಂದಾಗಿ ಈಗಾಗಲೇ ಕಿರಿದಾಗಿದ್ದ ಈ ರಸ್ತೆಯಲ್ಲಿ ಯಾವುದೇ ಪರ್ಯಾಯ ವ್ಯವಸ್ಥೆ ಮಾಡದೆ ಏಕಾಏಕಿ ರಸ್ತೆ ನಿರ್ಬಂಧಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಸೃಷ್ಟಿಯಾಗಿತ್ತು.
ಈ ದಟ್ಟಣೆಯ ನಡುವೆ ಗರ್ಭಿಣಿ ಪತ್ನಿಯನ್ನು ತುರ್ತಾಗಿ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿಯೊಬ್ಬರು ಸಿಲುಕಿಕೊಂಡಿದ್ದರು. ಎಷ್ಟು ಸಮಯ ಕಳೆದರೂ ಟ್ರಾಫಿಕ್ ಕದಲದಿದ್ದಾಗ ಆತಂಕಗೊಂಡ ಪತಿ, ಕಾರಿನಿಂದ ಕೆಳಗಿಳಿದು ನಡುರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು.
ರಸ್ತೆ ಮಧ್ಯದಲ್ಲೇ ನಿಂತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದ ಆ ವ್ಯಕ್ತಿ, “ಕಾರಿನಲ್ಲಿ ಗರ್ಭಿಣಿ ಇದ್ದಾಳೆ, ಸರ್ಕಾರಕ್ಕೆ ನಾವೇನೂ ಅಲ್ವಾ? ನಮ್ಮ ಪ್ರಾಣಕ್ಕಿಂತ ಝೀರೋ ಟ್ರಾಫಿಕ್ ಮುಖ್ಯಾನಾ?” ಎಂದು ಆಕ್ರೋಶದಿಂದ ಪ್ರಶ್ನಿಸಿದ್ದಾರೆ. ಸಾಮಾನ್ಯ ಜನರ ತುರ್ತು ಅಗತ್ಯಗಳಿಗಿಂತ ವಿಐಪಿಗಳ ಸಂಚಾರಕ್ಕೆ ಏಕೆ ಇಷ್ಟೊಂದು ಆದ್ಯತೆ ನೀಡಲಾಗುತ್ತಿದೆ ಎಂದು ಅವರು ಪ್ರಶ್ನಿಸಿದಾಗ, ಅಲ್ಲಿದ್ದ ಸಾರ್ವಜನಿಕರು ಕೂಡ ಅವರಿಗೆ ಬೆಂಬಲ ಸೂಚಿಸಿದರು.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕರು ವಿಐಪಿ ಸಂಸ್ಕೃತಿಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಐಟಿ ಕ್ಷೇತ್ರದ ಹಿರಿಯ ತಜ್ಞ ಟಿವಿ ಮೋಹನ್ ದಾಸ್ ಪೈ ಅವರು ಕೂಡ ಈ ಕುರಿತು ‘ಎಕ್ಸ್’ (ಟ್ವಿಟರ್) ನಲ್ಲಿ ಪ್ರತಿಕ್ರಿಯಿಸಿದ್ದು, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯಪಾಲರನ್ನು ಟ್ಯಾಗ್ ಮಾಡಿ ವಿಐಪಿ ಸಂಸ್ಕೃತಿಗೆ ಅಂತ್ಯ ಹಾಡಬೇಕು ಎಂದು ಒತ್ತಾಯಿಸಿದ್ದಾರೆ. “ಪೊಲೀಸರು ಅಗತ್ಯಕ್ಕಿಂತ ಹೆಚ್ಚು ಸಮಯ ರಸ್ತೆ ಸಂಚಾರ ಸ್ಥಗಿತಗೊಳಿಸುತ್ತಾರೆ. ನಾಗರಿಕರನ್ನು ಗೌರವದಿಂದ ನಡೆಸಿಕೊಳ್ಳಬೇಕು, ನಾವು ಯಾರ ಅಧೀನದಲ್ಲಿರುವ ಪ್ರಜೆಗಳಲ್ಲ” ಎಂದು ಅವರು ತೀವ್ರವಾಗಿ ಟೀಕಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಹಿರಿಯ ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು, ಪ್ರಕರಣದ ಬಗ್ಗೆ ಈಗಾಗಲೇ ತನಿಖೆ ಆರಂಭಿಸಲಾಗಿದ್ದು, ಘಟನೆಯ ನೈಜ ವಿವರಗಳನ್ನು ಪರಿಶೀಲಿಸಲಾಗುತ್ತಿದೆ. ತನಿಖಾ ವರದಿಯ ಆಧಾರದ ಮೇಲೆ ಮುಂದಿನ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


