ಕೊರಟಗೆರೆ: ಅತೀ ವೇಗ ಹಾಗೂ ನಿರ್ಲಕ್ಷ್ಯದ ಚಾಲನೆಯ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಇಬ್ಬರನ್ನು ಬಲಿ ಪಡೆದ ಘಟನೆ ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ವ್ಯಾಪ್ತಿಯ ಕಾಶಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದಿಂದ ಗೌರಿಬಿದನೂರು-ಮಧುಗಿರಿ-ಶಿರಾ ಮಾರ್ಗವಾಗಿ ತಿರುಪತಿಗೆ ತೆರಳುತ್ತಿದ್ದ ಸರಕಾರಿ ಬಸ್ ಕೊರಟಗೆರೆ ತಾಲೂಕಿನ ಕಾಶಾಪುರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೇವಿನ ಮರಕ್ಕೆ ಡಿಕ್ಕಿ ಹೊಡೆದಿದೆ.
ಇದೇ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಭಿಕ್ಷುಕನ ಮೇಲೆಯೇ ಬಸ್ ಹರಿದಿದ್ದು, ಪರಿಣಾಮವಾಗಿ ಆತನ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಇದಲ್ಲದೇ ರೈತ ಗೋಪಾಲನಾಯ್ಕ ಎಂಬವರಿಗೂ ಬಸ್ ಡಿಕ್ಕಿ ಹೊಡೆದಿದ್ದು, ಈ ವೇಳೆ ಗಾಯಾಳುವನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಅಪಘಾತದ ವೇಳೆ ಬಸ್ಸಿನಲ್ಲಿ 10 ಮಂದಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ. ಈ ಪೈಕಿ ನಿರ್ವಾಹಕ ಸೇರಿದಂತೆ 8 ಮಂದಿ ಪ್ರಯಾಣಿಕರಿಗೆ ಗಾಯವಾಗಿದೆ. ಅಪಘಾತದ ತೀವ್ರತೆಗೆ ಬಸ್ಸು ನಜ್ಜುಗುಜ್ಜಾಗಿದ್ದು, ಬಸ್ಸಿನ ನಿರ್ವಾಹಕನ ಕಾಲು ಬಸ್ಸಿನಲ್ಲೇ ಸಿಲುಕಿಕೊಂಡಿದ್ದು, ಸಾರ್ವಜನಿಕರು ನಿರ್ವಾಹಕನನ್ನು ರಕ್ಷಿಸಿ, ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ನಡೆದ ವೇಳೆ ಬಸ್ ಚಾಲಕ ಬಸ್ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರು ಕೊರಟಗೆರೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy