ಬೆಂಗಳೂರು: ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಬರ ನಿರ್ವಹಣೆ ವೈಫಲ್ಯ, ಕೆಪಿಎಸ್‌ಸಿ (KPSC) ನೇಮಕಾತಿ ಅಕ್ರಮ, ಪಡಿತರ ಅಕ್ಕಿ ಕಳ್ಳಸಾಗಣೆ ಹಾಗೂ ಬೆಲೆ ಏರಿಕೆಯಂತಹ ಪ್ರಮುಖ ವಿಷಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಸರ್ಕಾರವನ್ನು ಜಂಟಿಯಾಗಿ ತೊಳೆಯಲು ಬಿಜೆಪಿ ಹಾಗೂ ಜೆಡಿಎಸ್ ಸಜ್ಜಾಗಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ತರಾಟೆಗೆ ತೆಗೆದುಕೊಳ್ಳಲು ಬಿಜೆಪಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ಸಭೆ ಕರೆಯಲಾಗುವುದು ಎಂದರು.
ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರ ನಿಧನದ ಕಾರಣಕ್ಕೆ ಈವರೆಗೆ ಜೆಡಿಎಸ್ ನಾಯಕರೊಂದಿಗೆ ಮಾತುಕತೆ ನಡೆಸಲು ಸಾಧ್ಯವಾಗಿರಲಿಲ್ಲ. ಶೀಘ್ರದಲ್ಲೇ ಅವರೊಂದಿಗೆ ಚರ್ಚಿಸಿ, ಅಧಿವೇಶನದಲ್ಲಿ ಜಂಟಿಯಾಗಿ ಹೋರಾಟ ನಡೆಸಲು ತಂತ್ರ ರೂಪಿಸಲಾಗುವುದು ಎಂದರು.
ಕೆಪಿಎಸ್ ಸಿ ಅಕ್ರಮ ಆರೋಪ: ಕೆಪಿಎಸ್ ಸಿ ನಡೆಸಿರುವ ನೇಮಕಾತಿ ಪ್ರಕ್ರಿಯೆಗಳಲ್ಲಿ ವ್ಯಾಪಕ ಅಕ್ರಮ ನಡೆದಿದೆ. ಆಯೋಗದಲ್ಲಿ ಸುಧಾರಣೆ ತರುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿದ್ದರೂ ಯಾವುದೇ ಕೆಲಸವಾಗಿಲ್ಲ ಎಂದು ವಿಜಯೇಂದ್ರ ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿದರೂ ರಾಜ್ಯದ ಒಟ್ಟಾರೆ ಅಭಿವೃದ್ಧಿಯನ್ನು ನಿರ್ಲಕ್ಷಿಸಿದೆ. ‘ಗೃಹಲಕ್ಷ್ಮಿ’ಯಂತಹ ಯೋಜನೆಗಳ ನಿಜವಾದ ಪ್ರಯೋಜನ ಫಲಾನುಭವಿಗಳಿಗೆ ಸಿಗುತ್ತಿಲ್ಲ ಎಂದು ಆರೋಪ ಮಾಡಿದರು.
ಬೆಂಗಳೂರಿನಲ್ಲಿ ಪ್ರಸ್ತಾವಿತ ಎರಡನೇ ವಿಮಾನ ನಿಲ್ದಾಣ ಯೋಜನೆಯು ಸಾರ್ವಜನಿಕ ಹಿತಾಸಕ್ತಿಗಿಂತ ರಿಯಲ್ ಎಸ್ಟೇಟ್ ಹಿತಾಸಕ್ತಿಗಾಗಿ ನಡೆಸಲ್ಪಡುತ್ತಿದೆಯೇ ಎಂಬ ಅನುಮಾನ ಉಂಟಾಗಿದೆ ಎಂದು ಅವರು ಪ್ರಶ್ನಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
