ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಎರಡನೇ ದಿನದ ಕಲಾಪ ಗಲಾಟೆ, ಗದ್ದಲಕ್ಕೆ ಸಾಕ್ಷಿಯಾಗಿದೆ. ಬ್ರ್ಯಾಂಡ್ ಬೆಂಗಳೂರು ಗಲಾಟೆಯೊಂದಿಗೆ ಆರಂಭವಾದ ಕಲಾಪ ಕದನ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಕೇಸ್ವರೆಗೂ ತಲುಪಿತ್ತು. ಹಲವು ಬಾರಿ ಸದನದ ಬಾವಿಗಿಳಿದ ವಿಪಕ್ಷ ನಾಯಕರು ಸರ್ಕಾರದ ವಿರುದ್ಧ ಹೋರಾಟ ಮಾಡಿದರು.
ವಿಧಾನಸಭಾ ಅಧಿವೇಶನದ ಎರಡನೇ ದಿನ ಬ್ರ್ಯಾಂಡ್ ಬೆಂಗಳೂರು ಬಗ್ಗೆ ಬಿಸಿಬಿಸಿ ಚರ್ಚೆಯಾಗಿದೆ. ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆ ಬಗ್ಗೆ ಶಾಂತಿನಗರ ಶಾಸಕ ಹ್ಯಾರಿಸ್ ಪ್ರಸ್ತಾಪ ಮಾಡಿದ್ರು. ಈ ವೇಳೆ ಮಧ್ಯಪ್ರವೇಶಿಸಿದ ಬಿಜೆಪಿ ಶಾಸಕ ಬಸನಗೌಡ ಯತ್ನಾಳ್, ಬ್ರ್ಯಾಂಡ್ ಸಿಟಿ ಈಗ ಬಾಂಬ್ ಸಿಟಿ ಆಗಿದೆ ಎಂದು ಕಿಚಾಯಿಸಿದ್ದಾರೆ. ಈ ಹೇಳಿಕೆಯಿಂದ ಸದನದಲ್ಲಿ ಆಡಳಿತ, ವಿಪಕ್ಷ ಸದಸ್ಯರ ನಡುವೆ ವಾಗ್ವಾದ ನಡೆಯಿತು.
ಇತ್ತ ಪ್ರಶ್ನೋತ್ತರ ವೇಳೆಯಲ್ಲಿ ಬ್ರಾಂಡ್ ಬೆಂಗಳೂರು ಕುರಿತ ಪ್ರಶ್ನೆ ಸಂದರ್ಭ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಡಿಸಿಎಂ ಡಿ.ಕೆ. ಶಿವಕುಮಾರ್ ಪರವಾಗಿ ಸಚಿವ ರಾಮಲಿಂಗಾರೆಡ್ಡಿ ಉತ್ತರ ನೀಡುತ್ತಿದ್ದ ವೇಳೆಯೂ ಗದ್ದಲ ಉಂಟಾಯ್ತು.


