ಬೆಂಗಳೂರು: ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಮಹಿಳಾ ಅಧಿಕಾರಿಗಳನ್ನು ನಂಬಿಸಿ, ಅವರೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಬಳಿಕ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಇಂದಿರಾನಗರದ ಉದ್ಯಮಿ ಎಂ. ಕೃಪಲಾನಿ ಎಂಬಾತನನ್ನು ಪುಲಕೇಶಿನಗರ ಪೊಲೀಸರು ಬಂಧಿಸಿದ್ದಾರೆ.
ಈತ ಮುಖ್ಯವಾಗಿ ಜಿಎಸ್‌ಟಿ (GST) ಮತ್ತು ಕಸ್ಟಮ್ಸ್ (Customs) ಇಲಾಖೆಯ ಮಹಿಳಾ ಅಧಿಕಾರಿಗಳನ್ನೇ ಗುರಿಯಾಗಿಸಿಕೊಂಡಿದ್ದ. ಸುಮಾರು 50ಕ್ಕೂ ಹೆಚ್ಚು ಮಹಿಳಾ ಅಧಿಕಾರಿಗಳಿಗೆ ಈತ ವಂಚಿಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಉದ್ಯಮದ ನೆಪದಲ್ಲಿ ಅಧಿಕಾರಿಗಳನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈತ, ನಂತರ ಲಂಚ್ ಅಥವಾ ಡಿನ್ನರ್ ಗೆ ಆಹ್ವಾನಿಸಿ ಸ್ನೇಹ ಬೆಳೆಸುತ್ತಿದ್ದ. ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಬಂಧ ಬೆಳೆಸಿ, ಆ ಕ್ಷಣಗಳನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಳ್ಳುತ್ತಿದ್ದ. ನಂತರ ತನ್ನ ಬೇಡಿಕೆ ಈಡೇರಿಸದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ.
45 ವರ್ಷದ ಕಸ್ಟಮ್ಸ್ ಮಹಿಳಾ ಅಧಿಕಾರಿಯೊಬ್ಬರು ನೀಡಿದ ದೂರಿನನ್ವಯ ಪೊಲೀಸರು ಕೃಪಾಲನಿಯನ್ನು ಬಂಧಿಸಿದ್ದಾರೆ. ಆತನ ಮೊಬೈಲ್ ಮತ್ತು ಡಿಜಿಟಲ್ ಪುರಾವೆಗಳನ್ನು ಪರಿಶೀಲಿಸಿದಾಗ ಈ ಬೃಹತ್ ವಂಚನೆಯ ಜಾಲ ಪತ್ತೆಯಾಗಿದೆ.
ವೈದ್ಯಕೀಯ ತಪಾಸಣೆಗಾಗಿ ಬೌರಿಂಗ್ ಆಸ್ಪತ್ರೆ ಮತ್ತು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದಾಗ ಈತ ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿ ಉದ್ಧಟತನ ತೋರಿದ್ದಾನೆ. ಈ ಸಂಬಂಧ ಕಮರ್ಷಿಯಲ್ ಸ್ಟ್ರೀಟ್ ಮತ್ತು ವಿ.ವಿ. ಪುರಂ ಠಾಣೆಗಳಲ್ಲಿ ಪ್ರತ್ಯೇಕ ಎಫ್ ಐಆರ್ ದಾಖಲಿಸಲಾಗಿದೆ.
ಸದ್ಯ ಆರೋಪಿ ಕೃಪಲಾನಿ ನ್ಯಾಯಾಂಗ ಬಂಧನದಲ್ಲಿದ್ದು, ಈತನಿಂದ ಇನ್ನೂ ಎಷ್ಟು ಮಹಿಳೆಯರು ವಂಚನೆಗೊಳಗಾಗಿದ್ದಾರೆ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


