ಕೊರಟಗೆರೆ : ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೀಲಗಾನಹಳ್ಳಿ–ಕತ್ತಿ ನಾಗೇನಹಳ್ಳಿ ಸಂಪರ್ಕ ರಸ್ತೆಯ ಪಕ್ಕದಲ್ಲಿರುವ ತೊರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ಸ್ಥಳೀಯರಲ್ಲಿ ಆತಂಕ ಹಾಗೂ ಹಲವು ಅನುಮಾನಗಳಿಗೆ ಕಾರಣವಾಗಿದೆ.
ರಸ್ತೆ ಪಕ್ಕದ ತೊರೆಯಲ್ಲಿ ವ್ಯಕ್ತಿಯ ಮೃತದೇಹ ಬಿದ್ದಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ತಿಳಿಯುತ್ತಿದ್ದಂತೆ ಕೊರಟಗೆರೆ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಗಂಭೀರತೆಯನ್ನು ಪರಿಗಣಿಸಿ ಸಿಪಿಐ ಪುರುಷೋತ್ತಮ್, ಪಿಎಸ್ಐ ತೀರ್ಥೇಶ್ ಹಾಗೂ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ಮಂಜುನಾಥ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಘಟನಾ ಸ್ಥಳದಲ್ಲಿ ಮೃತ ದೇಹದ ಸ್ಥಿತಿಗತಿ ಹಾಗೂ ಸುತ್ತಮುತ್ತಲಿನ ಪರಿಸ್ಥಿತಿಯನ್ನು ಅಧಿಕಾರಿಗಳು ಪರಿಶೀಲಿಸಿದ್ದು, ಹೆಚ್ಚಿನ ಮಾಹಿತಿ ಕಲೆಹಾಕಲು ಶ್ವಾನದಳ ಮತ್ತು ಬೆರಳಚ್ಚು ತಜ್ಞರನ್ನು ಕರೆಸಲಾಗಿದೆ. ತಜ್ಞರು ಸ್ಥಳದಲ್ಲಿನ ಅಗತ್ಯ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದು, ಘಟನೆಯ ಕುರಿತು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ. ನಂತರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.
ಕೊಲೆಯೋ ಅಥವಾ ಆಕಸ್ಮಿಕ ಸಾವೋ?
ಅಪರಿಚಿತ ವ್ಯಕ್ತಿಯ ಮೃತದೇಹ ನಿರ್ಜನ ಪ್ರದೇಶದ ತೊರೆಯ ಪಕ್ಕದಲ್ಲಿ ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ವ್ಯಕ್ತಿಯನ್ನು ಬೇರೆಡೆ ಕೊಲೆ ಮಾಡಿ ಮೃತದೇಹವನ್ನು ಇಲ್ಲಿ ತಂದು ಎಸೆದಿರಬಹುದೆಂಬ ಶಂಕೆ ಸ್ಥಳೀಯರಲ್ಲಿ ವ್ಯಕ್ತವಾಗಿದೆ. ಆದರೆ ಈವರೆಗೆ ಕೊಲೆ ನಡೆದಿರುವುದಕ್ಕೆ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಮೃತ ವ್ಯಕ್ತಿಯ ಗುರುತು ಪತ್ತೆಯಾಗದಿರುವುದು ಪೊಲೀಸರಿಗೆ ತನಿಖೆಯ ಪ್ರಮುಖ ಸವಾಲಾಗಿದೆ.
ಮೃತ ವ್ಯಕ್ತಿ ಯಾರು? ಯಾವ ಊರಿನವರು? ಈ ಪ್ರದೇಶಕ್ಕೆ ಹೇಗೆ ಬಂದರು? ಸಾವಿಗೆ ಕಾರಣವೇನು? ಎಂಬ ಹಲವು ಪ್ರಶ್ನೆಗಳು ಇದೀಗ ಸಾರ್ವಜನಿಕರಲ್ಲಿ ಮೂಡಿವೆ. ವ್ಯಕ್ತಿಯ ಗುರುತು ಪತ್ತೆಹಚ್ಚಲು ಹಾಗೂ ಸಾವಿನ ಹಿಂದಿನ ನೈಜ ಕಾರಣ ತಿಳಿದುಕೊಳ್ಳಲು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರ ಸಾವಿನ ಸ್ವರೂಪದ ಕುರಿತು ಹೆಚ್ಚಿನ ಸ್ಪಷ್ಟತೆ ದೊರೆಯುವ ನಿರೀಕ್ಷೆಯಿದೆ. ಸುತ್ತ ಮುತ್ತಲಿನ ಗ್ರಾಮಗಳ ಜನರಿಂದ ಮಾಹಿತಿ ಸಂಗ್ರಹಿಸುವುದು ಸೇರಿದಂತೆ ಲಭ್ಯವಿರುವ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತ ವ್ಯಕ್ತಿಯ ಗುರುತು ಮತ್ತು ಸಾವಿನ ಹಿಂದಿನ ರಹಸ್ಯವನ್ನು ಪತ್ತೆ ಹಚ್ಚಲು ಪೊಲೀಸ್ ಇಲಾಖೆ ಮುಂದಾಗಿದೆ.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
