ಸರಗೂರು: ಸ್ತನ್ಯಪಾನದಿಂದ ಮಗುವಿನ ರೋಗನಿರೋಧಕ ಶಕ್ತಿ ಹೆಚ್ಚುವುದರ ಜೊತೆಗೆ ತಾಯಿ ಮತ್ತು ಮಗುವಿನ ಆರೋಗ್ಯ ಸುಧಾರಣೆಗೆ ಇದು ಅತ್ಯಂತ ಅಗತ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬ ತಾಯಿಯೂ ಮಗುವಿಗೆ ಸಮರ್ಪಕವಾಗಿ ಸ್ತನ್ಯಪಾನ ಮಾಡಿಸಬೇಕು ಎಂದು ಎಚ್.ಡಿ. ಕೋಟೆ ಮಕ್ಕಳ ಅಭಿವೃದ್ಧಿ ಯೋಜನಾ ಅಧಿಕಾರಿ (CDPO) ಸಿ. ದೀಪಾ ಕರೆ ನೀಡಿದರು.
ಪಟ್ಟಣದ 11ನೇ ವಾರ್ಡ್ನ ಬಿಡಗಲು ಅಂಗನವಾಡಿ ಕೇಂದ್ರದಲ್ಲಿ ಶನಿವಾರ ಆಯೋಜಿಸಲಾಗಿದ್ದ ‘ವಿಶ್ವ ಸ್ತನ್ಯಪಾನ ಸಪ್ತಾಹ ಜಾಗೃತಿ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
“ಪ್ರತಿಯೊಬ್ಬ ತಾಯಿ ಮತ್ತು ಕುಟುಂಬದಲ್ಲಿ ಸ್ತನ್ಯಪಾನದ ಮಹತ್ವದ ಕುರಿತು ಜಾಗೃತಿ ಮೂಡಿಸುವುದೇ ಈ ಸಪ್ತಾಹದ ಮುಖ್ಯ ಉದ್ದೇಶವಾಗಿದೆ. ಮಗು ಜನಿಸಿದ ಮೊದಲ ಒಂದು ಗಂಟೆಯೊಳಗೆ ತಾಯಿಯ ಎದೆಹಾಲು ಉಣಿಸುವುದು ಅತ್ಯಂತ ಮುಖ್ಯ. ಮೊದಲ ಆರು ತಿಂಗಳವರೆಗೆ ಮಗುವಿಗೆ ಕೇವಲ ತಾಯಿಯ ಹಾಲನ್ನು ಮಾತ್ರ ನೀಡಬೇಕು. ಇದು ಮಗುವಿನ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಆರೋಗ್ಯಕರ ಬೆಳವಣಿಗೆಗೆ ನೆರವಾಗುತ್ತದೆ” ಎಂದು ದೀಪಾ ತಿಳಿಸಿದರು.
ತಾಯಿಯ ಹಾಲು ಮಗುವಿಗೆ ಅತ್ಯುತ್ತಮ ಹಾಗೂ ಸುರಕ್ಷಿತ ಆಹಾರವಾಗಿದ್ದು, ತಾಯಿ-ಮಗುವಿನ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುತ್ತದೆ. ಆರು ತಿಂಗಳ ನಂತರ ಪೂರಕ ಆಹಾರದ ಜೊತೆಗೆ ಕನಿಷ್ಠ ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚು ಕಾಲ ಸ್ತನ್ಯಪಾನವನ್ನು ಮುಂದುವರಿಸಬೇಕು. ಗರ್ಭಿಣಿಯರು ಮತ್ತು ಬಾಣಂತಿಯರಿಗೆ ಈ ಕುರಿತು ಸರಿಯಾದ ಮಾಹಿತಿ ನೀಡುವುದು ಅಂಗನವಾಡಿ ಹಾಗೂ ಆರೋಗ್ಯ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಸಿಬ್ಬಂದಿಗೆ ಸೂಚಿಸಿದರು.
ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಈ ಜಾಗೃತಿ ಅಭಿಯಾನಕ್ಕೆ ಸಹಕರಿಸಬೇಕೆಂದು ಅವರು ವಿನಂತಿಸಿದರು.
ಕಾರ್ಯಕ್ರಮ ಮುಗಿದ ನಂತರ ಯೋಜನಾಧಿಕಾರಿಗಳು ಕಂದೇಗಾಲ, ಗದ್ದೇಹಳ್ಳ ಹಾಗೂ ಸಾಗರೆ ಗ್ರಾಮಗಳ ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಜಾಗೃತಿ ಕಾರ್ಯಕ್ರಮದಲ್ಲಿ ಅಂಗನವಾಡಿ ಮೇಲ್ವಿಚಾರಕಿ ರಜಿತ, ಸಮುದಾಯ ಆರೋಗ್ಯ ಅಧಿಕಾರಿಗಳು, ಸರಗೂರು ಪಟ್ಟಣದ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು, ಬಿಡಗಲು ಗ್ರಾಮಸ್ಥರು, ಗರ್ಭಿಣಿಯರು, ಬಾಣಂತಿಯರು ಹಾಗೂ ಮಕ್ಕಳ ತಾಯಂದಿರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
