ತುಮಕೂರು: ರಾಜ್ಯದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿಗೆ ಜನರು ಬೇಸತ್ತಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯ, ಜನರಿಗೆ ಗೌರವ ತರುವಂತಹ ಜನಪರ ಸರ್ಕಾರವನ್ನು ಅಧಿಕಾರಕ್ಕೆ ತರಲು ಜನರು ಆಶೀರ್ವದಿಸಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ತುಮಕೂರು ತಾಲೂಕಿನ ಮುಳಕುಂಟೆ ಗ್ರಾಮದಲ್ಲಿ ನಡೆದ ಶ್ರೀ ವಿಜಯ ಚೌಡೇಶ್ವರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಜನರು ಉತ್ತಮ ಆಡಳಿತವನ್ನು ಬಯಸುತ್ತಿದ್ದಾರೆ. ಹೀಗಾಗಿ ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಕೂಟವನ್ನು ಬೆಂಬಲಿಸುವ ಮೂಲಕ ಜನಪರ ಸರ್ಕಾರ ರಚಿಸಲು ಸಹಕರಿಸಬೇಕು ಎಂದು ತಿಳಿಸಿದರು.
ಕಳೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದಿಂದ ವಿ. ಸೋಮಣ್ಣ ಅವರನ್ನು ದಾಖಲೆ ಮತಗಳ ಅಂತರದಿಂದ ಗೆಲ್ಲಿಸಿದ್ದಕ್ಕೆ ಮತದಾರರಿಗೆ ಕೃತಜ್ಞತೆ ಸಲ್ಲಿಸಿದರು. ಈ ಗೆಲುವಿನಿಂದಾಗಿ ಸೋಮಣ್ಣ ಮತ್ತು ತಮಗೆ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿದೆ ಎಂದು ಸ್ಮರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಎನ್‌ಡಿಎ ಮೈತ್ರಿಕೂಟವು ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ಜಯ ಸಾಧಿಸಿದೆ. ಈ ಫಲಿತಾಂಶ ದೇಶದ ಮುಂದಿನ ರಾಜಕೀಯ ಬೆಳವಣಿಗೆಗಳಿಗೆ ದಿಕ್ಸೂಚಿಯಾಗಿದೆ ಎಂದು ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಬೇಕಿರುವ ಕಾರಣ ಜಾತ್ರಾ ಮಹೋತ್ಸವದ ಬಳಿಕ ಅವರು ತುರ್ತಾಗಿ ದೆಹಲಿಗೆ ಪ್ರಯಾಣ ಬೆಳೆಸಿದರು.
ಕಾರ್ಯಕ್ರಮಕ್ಕೂ ಮುನ್ನ ಸಚಿವರು ವಿಜಯ ಚೌಡೇಶ್ವರಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮೈತ್ರಿ ಪಕ್ಷಗಳ ನಾಯಕರು ಹಾಗೂ ಅಪಾರ ಸಂಖ್ಯೆಯ ಗ್ರಾಮಸ್ಥರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


