ಗುಬ್ಬಿ: ತಾಲ್ಲೂಕಿನ ಸಿ.ಎಸ್.ಪುರ ಗ್ರಾಮದಲ್ಲಿ ನವೆಂಬರ್ 13ರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕಂಚಿನ ಪುತ್ಥಳಿ ಲೋಕಾರ್ಪಣೆ, ಸಮುದಾಯ ಭವನ ಹಾಗೂ ದಾಸೋಹ ಭವನ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.
ಪಟ್ಟಣದ ಶಾಸಕ ಕಚೇರಿಯಲ್ಲಿ ಮಂಗಳವಾರ ಜನಸ್ಪಂದನ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು.
ಈ ಸಂದರ್ಭದಲ್ಲಿ ದಾರಿ ಸಮಸ್ಯೆಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಪರಿಶೀಲಿಸಿ, ಬಗರ್ ಹುಕುಂ ಸಮಿತಿ ಸಭೆ ನಡೆಸುವಂತೆ ತಹಶೀಲ್ದಾರ್ ಆರತಿ ಬಿ. ಅವರಿಗೆ ಸೂಚನೆ ನೀಡಿದರು.
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು 1962ರಲ್ಲಿಯೇ ಶಾಸಕರಾಗಿ ಆಯ್ಕೆಯಾಗುವ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿ, ಸುದೀರ್ಘ ಸಾರ್ವಜನಿಕ ಸೇವೆ ಹಾಗೂ ವಿಧಾನಸಭೆಯಲ್ಲಿ ಪರಿಣಾಮಕಾರಿ ಮಾತುಗಾರಿಕೆಯ ಮೂಲಕ ಜನಮೆಚ್ಚುಗೆ ಗಳಿಸಿದ್ದಾರೆ. ಅವರ ಸೇವೆ ಮತ್ತು ಸಾಧನೆಗಳನ್ನು ಸ್ಮರಿಸಿ ಗೌರವ ಸಲ್ಲಿಸುವ ಉದ್ದೇಶದಿಂದ ಕಂಚಿನ ಪುತ್ಥಳಿ ಸ್ಥಾಪಿಸಲಾಗಿದ್ದು, ಅದರ ಲೋಕಾರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.
ಕೇಂದ್ರ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಅವರು ಕಂಚಿನ ಪುತ್ಥಳಿಯನ್ನು ಲೋಕಾರ್ಪಣೆಗೊಳಿಸಲಿದ್ದು, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಸಮುದಾಯ ಭವನ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ್ ಅವರು ದಾಸೋಹ ಭವನ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೇಶವ ಪ್ರಸಾದ್, ಮಾಜಿ ಶಾಸಕ ಮಸಾಲೆ ಜಯರಾಮ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಚನ್ನೇನಹಳ್ಳಿ ನರಸಿಂಹಮೂರ್ತಿ, ಬೋರಪ್ಪನಹಳ್ಳಿ ಕುಮಾರ್, ಬೀರಮಾರನಹಳ್ಳಿ ನರಸೇಗೌಡ, ಮಂಗಿಕುಪ್ಪೆ ಬಸವರಾಜು, ಸಿ.ಎಸ್. ಹೋಬಳಿ ಜೆಡಿಎಸ್ ಅಧ್ಯಕ್ಷ ಜಗದೀಶ್, ಅಂಕಳಕೊಪ್ಪ ರಾಮು, ಚಂಗಾವಿ ಕುಮಾರ್, ಸೋಮಣ್ಣ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
