ಕೊರಟಗೆರೆ: ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣ ಮಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ. ಇದು ಪ್ರತಿಯೊಬ್ಬ ನಾಗರಿಕನ ಆದ್ಯ ಕರ್ತವ್ಯವಾಗಿದ್ದು, ಈ ನಿಟ್ಟಿನಲ್ಲಿ ಯುವಜನತೆಯಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಅತ್ಯಗತ್ಯ ಎಂದು ಕೊರಟಗೆರೆ ಪೊಲೀಸ್ ಠಾಣೆಯ ಪಿಎಸ್ ಐ ತೀರ್ಥೇಶ್ ತಿಳಿಸಿದರು.
ಪಟ್ಟಣದ ಸರ್ಕಾರಿ ಕಿರಿಯ ಕಾಲೇಜಿನಲ್ಲಿ ‘ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರೋಧಿ ಅಂತರರಾಷ್ಟ್ರೀಯ ದಿನ’ದ ಅಂಗವಾಗಿ ಪೊಲೀಸ್ ಇಲಾಖೆಯಿಂದ ಹಮ್ಮಿಕೊಂಡಿದ್ದ “ಡ್ರಗ್ಸ್ ಮುಕ್ತ ಸಮಾಜಕ್ಕಾಗಿ ಜಾಗೃತಿ ಅಭಿಯಾನ”ದ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯುವ ಜನತೆಯನ್ನು ಗುರಿಯಾಗಿಸಿಕೊಂಡು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ವಿವಿಧ ರೂಪದಲ್ಲಿ ಮಾದಕ ವಸ್ತುಗಳನ್ನು ತಯಾರಿಸಿ ಮಾರಾಟ ಮಾಡಲು ಮುಂದಾಗಿರುವುದು ದುರದೃಷ್ಟಕರ ಸಂಗತಿ ಎಂದ ಅವರು, ಮಾದಕ ವಸ್ತುಗಳ ಸಾಗಣೆ, ಸಂಗ್ರಹಣೆ ಹಾಗೂ ಜಮೀನುಗಳಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಬೆಳೆಯುವ ಪ್ರಕರಣಗಳನ್ನು ಪೊಲೀಸ್ ಇಲಾಖೆ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ ಎಂದು ಎಚ್ಚರಿಸಿದರು. ಇಂತಹ ಯಾವುದೇ ಅಕ್ರಮ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಅವರು ಕರೆ ನೀಡಿದರು.
ಡ್ರಗ್ಸ್ ನಿಗ್ರಹದಲ್ಲಿ ಸಮುದಾಯದ ಪಾತ್ರ ದೊಡ್ಡದಿದೆ. ಪೋಷಕರು ತಮ್ಮ ಮಕ್ಕಳ ನಡವಳಿಕೆಗಳ ಮೇಲೆ ನಿರಂತರ ನಿಗಾ ಇಡಬೇಕು ಹಾಗೂ ಅವರೊಂದಿಗೆ ಉತ್ತಮ ಸಂವಹನ ಇಟ್ಟುಕೊಳ್ಳಬೇಕು. ಸಮುದಾಯದ ಮಟ್ಟದಲ್ಲಿ ದುಶ್ಚಟಗಳ ವಿರುದ್ಧ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳುವ ಮೂಲಕ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸಬೇಕಾಗಿದೆ.
— ತೀರ್ಥೇಶ್, ಪಿಎಸ್ ಐ ಕೊರಟಗೆರೆ
ಈ ಜಾಗೃತಿ ಜಾಥಾದಲ್ಲಿ ಸರ್ಕಾರಿ ಕಿರಿಯ ಕಾಲೇಜಿನ ಪ್ರಾಂಶುಪಾಲರು, ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಪೊಲೀಸ್ ಇಲಾಖೆಯ ಸಿಬ್ಬಂದಿ ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿದ ಜಾಥಾವು, ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣದ ಕುರಿತು ಸಾರ್ವಜನಿಕರಲ್ಲಿ ಯಶಸ್ವಿಯಾಗಿ ಅರಿವು ಮೂಡಿಸಿತು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC




