ಬೆಂಗಳೂರು: ಅರಣ್ಯ ಕಾಯ್ದೆ ಹಾಗೂ ವನ್ಯಜೀವಿ ಕಾಯ್ದೆ ಸೇರಿದಂತೆ ಅರಣ್ಯ ಇಲಾಖೆಗೆ ಸಂಬಂಧಿಸಿದ ಇತರೆ ಕಾನೂನುಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ವ್ಯಾಪಕ ಪ್ರಚಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅರಣ್ಯ ಇಲಾಖೆಯಿಂದ ಕ್ರಮವಹಿಸಲಾಗುವುದು ಎಂದು ಅರಣ್ಯ ಇಲಾಖೆ ಸಚಿವ ಈಶ್ವರ ಬಿ ಖಂಡ್ರೆ ಹೇಳಿದರು.
ವಿಕಾಸ ಸೌಧದ ಕೊಠಡಿ ಸಂಖ್ಯೆ 422 ರಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಅರಣ್ಯ ಇಲಾಖೆಯ ಕಾನೂನಿನ ಬಗ್ಗೆ ಮಾಹಿತಿಯ ಕೊರತೆ ಇರುವ ಕಾರಣ, ಕಾಯ್ದೆ ಸೇರಿದಂತೆ ಇತರೆ ಕಾನೂನಿನ ಉಲ್ಲಂಘನೆ ಸಾರ್ವಜನಿಕ ವಲಯದಲ್ಲಿ ಕಂಡುಬರುತ್ತಿದೆ ಎಂದರು.
ಕನ್ನಡ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸ್ಪರ್ಧಿಯಾದ ವರ್ತೂರು ಸಂತೋಷ ಅವರ ಹುಲಿ ಉಗುರು ಧಾರಣೆಯ ಪ್ರಕರಣದ ನಂತರ ಇಲ್ಲಿಯವರೆಗೆ 8 ದೂರುಗಳು ಸಾರ್ವಜನಿಕರ ಕಡೆಯಿಂದ ಬಂದಿದೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನಾ ಕಾರ್ಯ ನಡೆಯುತ್ತಿದ್ದು, ಕಾನೂನಿನ ಪ್ರಕಾರ ಕ್ರಮವಹಿಸಲಾಗುವುದು ಎಂದರು.
ಈ ನೆಲದ ಕಾನೂನು ಎಲ್ಲರಿಗೂ ಒಂದೇ. ವನ್ಯಜೀವಿ ಸಂರಕ್ಷಣಾ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದ್ದು, ಈಗಾಗಲೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಲಾಗಿದೆ. ವನ್ಯಜೀವಿ ಕಾಯ್ದೆಯನ್ನು ಉಲ್ಲಂಘನೆ ಮಾಡಿದವರು ಶಿಕ್ಷೆಗೆ ಅರ್ಹರು ಎಂದರು.
ವನ್ಯಜೀವಿಗಳ ಉತ್ಪನ್ನಗಳನ್ನು ಯಾರೂ ಸಹ ಮಾರಾಟ ಮಾಡಬಾರದು ಹಾಗೂ ಉಪಯೋಗಿಸುವುದು ಕಾನೂನು ಬಾಹಿರ. ಸರ್ಕಾರ ಈ ನಿಟ್ಟಿನಲ್ಲಿ ಎಲ್ಲಾ ರೀತಿಯ ಅಗತ್ಯ ಕ್ರಮವಹಿಸುತ್ತಿದೆ ವನ್ಯಜೀವಿ ಸಂರಕ್ಷಣಾ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು.
ಅರಣ್ಯ ಇಲಾಖೆಯಲ್ಲಿ 4000 ಹುದ್ದೆಗಳು ಕಾಲಿಯಿದ್ದು, ಈಗಾಗಲೇ 800 ಹುದ್ದೆಗಳ ಭರ್ತಿಗೆ ಅನುಮತಿ ಸಿಕ್ಕಿದ್ದು, ಮುಂದಿನ ದಿನಗಳಲ್ಲಿ ಉಳಿದ ಹುದ್ದೆಗಳ ಭರ್ತಿ ಕ್ರಮವಹಿಸಲಾಗುವುದು ಎಂದು ಸಚಿವರು ಈಶ್ವರ ಬಿ.ಖಂಡ್ರೆ ತಿಳಿಸಿದರು.


