ವಿಜಯಪುರ: ಕಾರು ಮಗುಚಿ ಬಿದ್ದು, ಅಪ್ರಾಪ್ತ ವಯಸ್ಸಿನ ಬಾಲಕ ಸೇರಿದಂತೆ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಗಂಗೂರು ಗ್ರಾಮದ ಬಳಿಯಲ್ಲಿ ನಡೆದಿದೆ.
ಸಲೀಂ ಟಕ್ಕಳಕಿ (20) ಸೈಫನ್ ತಾಂಬೋಳೆ (17) ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ಗಾಯಾಳುಗಳ ಪೈಕಿ ಸಲೀಂ ಸ್ಥಳದಲ್ಲೇ ಮೃತಪಟ್ಟಿದ್ದರೆ, ಸೈಫನ್ ಆಸ್ಪತ್ರೆಗೆ ಸಾಗಿಸುತ್ತಿದ್ದ ದಾರಿ ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಿಂದ ದೇವರಹಿಪ್ಪರಗಿ ಪಟ್ಟಣಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಮೃತರು ಹಾಗೂ ಗಾಯಾಳು ದೇವರಹಿಪ್ಪರಗಿ ಪಟ್ಟಣದ ವಾಸಿಗಳಾಗಿದ್ದು, ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.