ಹಿರಿಯೂರು: ಕಾರಿಗೆ ಈಚರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನ ಚಾಲಕ ದಾರುಣವಾಗಿ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ತಾಲೂಕಿನ ವಾಣಿವಿಲಾಸಪುರ ಗ್ರಾಮದ ಸಮೀಪವಿರುವ ಪವರ್ ಸ್ಟೇಷನ್ ಬಳಿ ನಡೆದಿದೆ.
ವಾಣಿವಿಲಾಸಪುರ ಗ್ರಾಮದ ಸಮೀಪವಿರುವ ಪವರ್ ಸ್ಟೇಷನ್ ಬಳಿ ಈಚರ್ ಲಾರಿಯೊಂದು ಕಾರನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರಿನ ಬಲ ಭಾಗಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದ್ದು, ಕಾರಿನಲ್ಲಿದ್ದ ಮಂಜುನಾಥ್ ಅವರಿಗೆ ಗಂಭೀರವಾಗಿ ಗಾಯವಾಗಿದೆ. ಕಾರಿನಲ್ಲಿದ್ದ ಇತರರಿಗೂ ತೀವ್ರವಾದ ಗಾಯಗಳಾಗಿವೆ.
ಮಂಜುನಾಥ್ ಅವರನ್ನು ತಕ್ಷಣವೇ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ಯತ್ನಿಸಲಾಗಿದ್ದು, ಆದರೆ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಇತರ ಮೂವರು ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೃತ ಮಂಜುನಾಥ್ ಅವರು ವಾಣಿವಿಲಾಸಪುರ ಗ್ರಾಮದ ಹಾಸ್ಟೆಲ್ ನಲ್ಲಿ ವಾಚ್ ಮ್ಯಾನ್ ಆಗಿ ಕೆಲಸ ನಿರ್ವಹಿಸುತ್ತಿದ್ದು, ತಮ್ಮ ಕುಟುಂಬಕ್ಕೆ ಆಧಾರ ಸ್ತಂಭವಾಗಿದ್ದರು. ಆದರೆ, ಇದೀಗ ಅವರು ಮೃತಪಟ್ಟಿರುವುದರಿಂದ ಇಡೀ ಕುಟುಂಬ ಸಂಕಷ್ಟದಲ್ಲಿದೆ.
ಘಟನಾ ಸ್ಥಳಕ್ಕೆ ಹಿರಿಯೂರು ತಾಲ್ಲೂಕಿನ ಗ್ರಾಮಾಂತರ ಪೋಲಿಸ್ ಠಾಣೆಯ ನಿರೀಕ್ಷಕರಾದ ಆನಂದ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರಗಿಸಿದ್ದಾರೆ.
ಈ ರಸ್ತೆ ಕಿರಿದಾಗಿದ್ದು, ಈಗಾಗಲೇ ಡೇಂಜರ್ ಝೋನ್ ಎಂಬ ಹೆಸರನ್ನೂ ಪಡೆದುಕೊಂಡಿದೆ. ಈ ರಸ್ತೆಯಲ್ಲಿ ರಸ್ತೆ ಸುರಕ್ಷತೆಗೆ ಸಂಬಂಧಪಟ್ಟವರು ಸೂಕ್ತವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಇನ್ನೂ ಅಪಘಾತ ನಡೆಸಿ ಪರಾರಿಯಾದ ವಾಹನ ಚಾಲಕನ ಬಂಧನಕ್ಕಾಗಿ ಪೊಲೀಸರು ಶೋಧ ಆರಂಭಿಸಿದ್ದು, ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ವರದಿ: ಮುರುಳಿಧರನ್ ಆರ್ ಹಿರಿಯೂರು. ( ಚಿತ್ರದುರ್ಗ- ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5