ತುಮಕೂರು : ಸಂತಶ್ರೇಷ್ಠ ಕನಕದಾಸರ 539ನೇ ಜಯಂತ್ಯೋತ್ಸವದ ಅಂಗವಾಗಿ ತುಮಕೂರು ನಗರದಲ್ಲಿ ಭವ್ಯ ಮೆರವಣಿಗೆ ಹಾಗೂ ಸಂಭ್ರಮದ ಆಚರಣೆ ನಡೆಯಿತು.
ನಗರದ ಶಿರಾ ಗೇಟ್ನ ಬಿ.ಜೆ.ಎಸ್. ವೃತ್ತದಿಂದ ಆರಂಭಗೊಂಡ ಕನಕದಾಸರ ಭಾವಚಿತ್ರದ ಮೆರವಣಿಗೆಯು ಎಂ.ಜಿ. ರಸ್ತೆ ಹಾಗೂ ಅಶೋಕ ರಸ್ತೆ ಮೂಲಕ ಸಾಗಿಬಂದು ಡಾ. ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ ಅಂತ್ಯಗೊಂಡಿತು.
ಜಾನಪದ ಕಲಾತಂಡಗಳ ವೈವಿಧ್ಯಮಯ ಪ್ರದರ್ಶನ, ಕಲಾವಿದರ ನೃತ್ಯ ಹಾಗೂ ಸಾಂಸ್ಕೃತಿಕ ವೈಭವ ಮೆರವಣಿಗೆಗೆ ವಿಶೇಷ ಮೆರುಗು ನೀಡಿತು. ಸಾರ್ವಜನಿಕರು, ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಕುರುಬ ಸಮುದಾಯದ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಂತಶ್ರೇಷ್ಠ ಕನಕದಾಸರಿಗೆ ಗೌರವ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಜಿ.ಬಿ. ಜ್ಯೋತಿ ಗಣೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶ್ವಿಜಾ ಬಿ.ವಿ., ಮಹಾನಗರ ಪಾಲಿಕೆ ಆಯುಕ್ತರು, ತಹಶೀಲ್ದಾರರು, ವಿವಿಧ ಇಲಾಖೆಗಳ ಅಧಿಕಾರಿಗಳು, ಕುರುಬ ಸಮುದಾಯದ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗವಹಿಸಿದ್ದರು.
ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ, ಕಾಳಿದಾಸ ವಿದ್ಯಾವರ್ಧಕ ಸಂಘ ಹಾಗೂ ಜಿಲ್ಲೆಯ ವಿವಿಧ ಕುರುಬರ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಜಯಂತ್ಯೋತ್ಸವವನ್ನು ಆಯೋಜಿಸಲಾಗಿತ್ತು.
ಸಮಾನತೆ ಸಾರಿದ ಕನಕದಾಸರ ಸಂದೇಶ ಸ್ಮರಣೆ
ಕಾರ್ಯಕ್ರಮದಲ್ಲಿ ಕನಕದಾಸರ ಜೀವನ, ಸಾಹಿತ್ಯ, ಭಕ್ತಿ ಪರಂಪರೆ ಹಾಗೂ ಅವರು ಸಾರಿದ ಸಮಾನತೆ, ಮಾನವೀಯತೆ ಮತ್ತು ಸಾಮಾಜಿಕ ಸಾಮರಸ್ಯದ ಮೌಲ್ಯಗಳನ್ನು ಸ್ಮರಿಸಲಾಯಿತು. ಜಾತಿ-ಧರ್ಮಗಳ ಭೇದಭಾವ ಮೀರಿ ಮಾನವೀಯತೆಯ ಸಂದೇಶ ಸಾರಿದ ಕನಕದಾಸರ ಚಿಂತನೆಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ. ಅವರ ಆದರ್ಶ ಮತ್ತು ಸಂದೇಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಸಮಾನತೆಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂಬ ಆಶಯ ವ್ಯಕ್ತವಾಯಿತು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
