ತುಮಕೂರು: ಜಿಲ್ಲಾ ಮಟ್ಟದ ದಸರಾ ಕ್ರೀಡಾ ಕೂಟಕ್ಕಿಂದು ಗುಂಡು ಎಸೆಯುವ ಮೂಲಕ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಚಾಲನೆ ನೀಡಿದರು.
ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರದಿಂದ ಕ್ರೀಡೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕ್ರೀಡಾಪಟುಗಳಿಗೆ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಿದ್ದು, ಕ್ರೀಡಾಪಟುಗಳು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಮನುಷ್ಯ ಸ್ವಾಭಾವಿಕವಾಗಿ ಸೃಜನಶೀಲತೆ ಬೆಳೆಸಿಕೊಳ್ಳಲು ಕ್ರೀಡೆ ಬಹಳ ಮುಖ್ಯ. ಕ್ರೀಡಾಪಟುಗಳು ತಮ್ಮ ಸತತ ಪ್ರಾಮಾಣಿಕ ಪ್ರಯತ್ನದಿಂದ ಗುರಿ ಸಾಧಿಸುವ ಮೂಲಕ ಪೋಷಕರಿಗೆ ಗೌರವ ತರಬೇಕೆಂದು ಹೇಳಿದರು.
ಗೃಹ ಸಚಿವರ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ. ನಾಗಣ್ಣ ಮಾತನಾಡಿ, ವಿದ್ಯಾರ್ಥಿಗಳು ವಿದ್ಯಾಭ್ಯಾಸ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಬೇಕು. ಸರ್ಕಾರದಿಂದ ಜಿಲ್ಲೆಯಲ್ಲಿ ಉತ್ತಮ ಕ್ರೀಡಾಂಗಣ ನಿರ್ಮಾಣ ಮಾಡಲಾಗಿದ್ದು, ಕ್ರೀಡಾಪಟುಗಳು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೋಹಿತ್ ಗಂಗಾಧರ್, ಕೌಶಲ್ಯಾಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಮುರಳೀಧರ ಹಾಲಪ್ಪ, ಕಬ್ಬಡಿ ತರಬೇತಿದಾರರಾದ ಉಸ್ತಾನ್ ವಿಜ್, ಮುನಿರಾಜು, ಮೊಹಮ್ಮದ್ ಇಸ್ಮಾಯಿಲ್, ಅಥ್ಲೆಟಿಕ್ಸ್ ಅಸೋಸಿಯೇಷನ್ನ ಪ್ರಭಾಕರ್, ಕುಸ್ತಿ ತರಬೇತಿದಾರ ರವಿ, ವಿವಿಧ ಕ್ರೀಡಾಪಟುಗಳು ಮತ್ತಿತರರು ಭಾಗವಹಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296