ತುಮಕೂರು: ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವುದರೊಂದಿಗೆ ಔಷಧಿ ಕೊರತೆಯಾಗದಂತೆ ಎಚ್ಚರಿಕೆವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಸೂಚನೆ ನೀಡಿದರು.
ಶುಕ್ರವಾರ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಆರೋಗ್ಯ ಸಮಿತಿ ಸಭೆ ನಡೆಸಿ ಮಾತನಾಡಿದ ಅವರು ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯವಿರುವ ಎಲ್ಲಾ ಔಷಧಗಳನ್ನು ಲಭ್ಯವಿರುವಂತೆ ಕ್ರಮವಹಿಸಬೇಕು. ಪ್ರತಿ ತಾಲ್ಲೂಕು ಹಾಗೂ ಹೋಬಳಿ ಮಟ್ಟದ ಆಸ್ಪತ್ರೆಯ ಆವರಣದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುವ ಮೂಲಕ ಖಾಸಗಿ ಆಸ್ಪತ್ರೆಗಳ ಅವಲಂಬನೆಯನ್ನು ಕಡಿಮೆ ಮಾಡಬೇಕು ಎಂದು ನಿರ್ದೇಶಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಶೌಚಾಲಯ, ಶುದ್ಧ ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯಗಳನ್ನು ಒದಗಿಸಬೇಕು. ಪ್ರಯೋಗಾಲಯ ಹಾಗೂ ಔಷಧ ಸಂಗ್ರಹಣಾ ಘಟಕಗಳನ್ನು ಉತ್ತಮವಾಗಿ ನಿರ್ವಹಣೆ ಮಾಡಬೇಕು ಎಂದು ತಿಳಿಸಿದರು.
ಅಧಿಕಾರಿಗಳು ಸ್ಥಳೀಯ ಆಸ್ಪತ್ರೆಗಳಿಗೆ ಖುದ್ದಾಗಿ ಭೇಟಿ ನೀಡಿ, ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿಯನ್ನು ನೇರವಾಗಿ ಪರಿಶೀಲಿಸಬೇಕೆಂದು ಸಲಹೆ ನೀಡಿದರು. ಜನರಿಗೆ ಸುಗಮವಾದ, ಸುಸ್ಥಿರವಾದ ಆರೋಗ್ಯ ಸೇವೆ ನೀಡಬೇಕೆಂಬ ಉದ್ದೇಶದಿಂದ ಶಿಥಿಲಗೊಂಡ ಸರ್ಕಾರಿ ಆಸ್ಪತ್ರೆಗಳ ಪುನಶ್ಚೇತನ ಕಾರ್ಯವನ್ನು ಕೈಗೊಳ್ಳಲಾಗುವುದು. ಇದಕ್ಕಾಗಿ ಸರ್ಕಾರದಿಂದ ಅನುದಾನ ಮಂಜೂರಾಗಿದ್ದು, ಶೀಘ್ರದಲ್ಲೇ ದುರಸ್ತಿ ಕಾರ್ಯಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್ ಹಾಗೂ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


