ಹಾಸನ: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ. ಗೌಡರ ಹುಟ್ಟೂರಾದ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹರದನಹಳ್ಳಿ ಮಾವಿನಕೆರೆಯ ರಂಗನಾಥಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸೋಮವಾರ (ಜುಲೈ 20) ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು.
ಅಂತ್ಯಕ್ರಿಯೆಗೂ ಮುನ್ನ ಗಣ್ಯರು ಪಾರ್ಥಿವ ಶರೀರಕ್ಕೆ ಅಂತಿಮ ಪುಷ್ಪನಮನ ಸಲ್ಲಿಸಿದರು. ಬಳಿಕ ಪೊಲೀಸರು ಮೂರು ಸುತ್ತು ಕುಶಾಲತೋಪು ಸಿಡಿಸಿ, ರಾಷ್ಟ್ರಗೀತೆ ನಮನದೊಂದಿಗೆ ಸರ್ಕಾರಿ ಗೌರವ ವಂದನೆ ಸಲ್ಲಿಸಿದರು. ಎರಡು ನಿಮಿಷಗಳ ಕಾಲ ಮೌನಾಚರಣೆ ನಡೆಸಿದ ನಂತರ, ಮುಖ್ಯಮಂತ್ರಿಗಳು ದೇವೇಗೌಡರ ಕುಟುಂಬಕ್ಕೆ ರಾಷ್ಟ್ರಧ್ವಜವನ್ನು ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೆಚ್.ಡಿ. ದೇವೇಗೌಡರ ಕಾಲಿಗೆ ನಮಸ್ಕರಿಸಿ ವಂದಿಸಿದರು.
ಸರ್ಕಾರಿ ಗೌರವಗಳ ಬಳಿಕ ದೇಹ ಶುದ್ಧಿ ಕಾರ್ಯ ನಡೆಯಿತು. ದೇವೇಗೌಡರು ಮತ್ತು ಅವರ ಕುಟುಂಬಸ್ಥರು ಪಾರ್ಥಿವ ಶರೀರಕ್ಕೆ ಅಂತಿಮ ಪೂಜಾ ವಿಧಿವಿಧಾನಗಳನ್ನು ನೆರವೇರಿಸಿದರು. ಅರ್ಚಕರ ತಂಡದಿಂದ ಸ್ತೋತ್ರ ಪಠಣ ಕಾರ್ಯ ನಡೆದ ಬಳಿಕ ಮೂರು ಸುತ್ತು ಪಲ್ಲಕ್ಕಿ ಮೆರವಣಿಗೆ ನಡೆಸಿ, ಒಕ್ಕಲಿಗ ಸಂಪ್ರದಾವನ್ನು ಅನುಸರಿಸಿ ಅಂತಿಮ ಸಂಸ್ಕಾರವನ್ನು ಮಾಡಲಾಯಿತು. ಚೆನ್ನಮ್ಮ ಅವರ ಹಿರಿಯ ಪುತ್ರ ಹೆಚ್.ಡಿ. ರಮೇಶ್ ಅವರು ಅಂತ್ಯಕ್ರಿಯೆಯ ಸಂಪೂರ್ಣ ಕಾರ್ಯವಿಧಾನಗಳನ್ನು ನೆರವೇರಿಸಿದರು.
ಅಂತ್ಯಕ್ರಿಯೆಗೂ ಮುನ್ನ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಹೆಚ್.ಡಿ. ಕುಮಾರಸ್ವಾಮಿ, ವಿ. ಸೋಮಣ್ಣ, ಶಿವರಾಜ್ ಸಿಂಗ್ ಚೌಹಾಣ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಇಂಧನ ಸಚಿವ ಕೆ.ಜೆ. ಜಾರ್ಜ್, ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ, ಶಾಸಕರಾದ ಬಿ.ಯಾವಿ. ವಿಜಯೇಂದ್ರ, ಬಿ.ವೈ. ರಾಘವೇಂದ್ರ ಸೇರಿದಂತೆ ಹಿರಿಯ ಹಾಗೂ ಕಿರಿಯ ಶಾಸಕರು, ಸಂಸದರು ಮತ್ತು ಪರಿಷತ್ ಸದಸ್ಯರು ಅಂತಿಮ ದರ್ಶನ ಪಡೆದು ಪುಷ್ಪನಮನ ಸಲ್ಲಿಸಿದರು.
ಅಲ್ಲದೆ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ನಂಜಾವಧೂತ ಶ್ರೀಗಳು ಹಾಗೂ ರಂಭಾಪುರಿ ಶ್ರೀಗಳು ಸೇರಿದಂತೆ ಹಲವು ಮಠಾಧೀಶರು ಆಗಮಿಸಿ ಅಂತಿಮ ನಮನ ಸಲ್ಲಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಹಾಗೂ ಅಂತ್ಯಕ್ರಿಯೆಯ ಹಿನ್ನೆಲೆಯಲ್ಲಿ ಹೊಳೆನರಸೀಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿತ್ತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


