ತುಮಕೂರು: ತುಮಕೂರು ಜಿಲ್ಲೆಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ವಿವಿಧ ಇಲಾಖೆಗಳ ಯೋಜನೆಯ ಫಲಾನುಭವಿಗಳಿಗೆ ಸವಲತ್ತು ವಿತರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸೆಂಬರ್ 2ರಂದು ನಗರಕ್ಕೆ ಆಗಮಿಸಲಿದ್ದಾರೆ ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.
ನಗರದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 2ರಂದು ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ಬೃಹತ್ ಕಾರ್ಯಕ್ರಮ ನಡೆಯಲಿದೆ. ಇಂಧನ ಸಚಿವ ಕೆ.ಜೆ.ಜಾರ್ಜ್, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ಕಂದಾಯ ಸಚಿವ ಕೃಷ್ಣಬೈರೇಗೌಡ, ಕಾರ್ಮಿಕ ಸಚಿವ ಸಂತೋಷ್ ಲಾಡ್, ಕೃಷಿ ಸಚಿವ ಚಲುವರಾಯಸ್ವಾಮಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳ ಸಚಿವರು, ಜಿಲ್ಲೆಯ ಶಾಸಕರು ಹಾಗೂ ಕೇಂದ್ರ ಸಚಿವ ವಿ.ಸೋಮಣ್ಣ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.
ಮುಖ್ಯಮಂತ್ರಿಗಳ ಕಾರ್ಯಕ್ರಮದಲ್ಲಿ ಸುಮಾರು 938 ಕೋಟಿ ರೂ. ಮೊತ್ತದ 825 ಕಾಮಗಾರಿಗಳಿಗೆ ಶಂಕುಸ್ಥಾಪನೆ, 94 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾದ 66 ನೂತನ ಕಾಮಗಾರಿಗಳ ಉದ್ಘಾಟನೆ, ವಿವಿಧ ಇಲಾಖೆಗಳ 1.50 ಲಕ್ಷ ಫಲಾನುಭವಿಗಳಿಗೆ ಸವಲತ್ತು ವಿತರಣೆ, ಕಂದಾಯ ಇಲಾಖೆಯಿಂದ ಇ–ಸ್ವತ್ತು, ಹಕ್ಕು ಪತ್ರಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಕೃಷಿ ಇಲಾಖೆಯಿಂದ ಫಲಾನುಭವಿ ರೈತರಿಗೆ ಟ್ರ್ಯಾಕ್ಟರ್, ಡೀಸೆಲ್ ಇಂಜಿನ್, ಪಿವಿಸಿ ಪೈಪ್, ತುಂತುರು ನೀರಾವರಿಯ ಕಿಟ್, ತೋಟಗಾರಿಕೆ ಇಲಾಖೆಯಲ್ಲಿ ಹನಿ ನೀರಾವರಿ, ಪವರ್ ಫೀಡರ್ಸ್, ರೇಷ್ಮೆ ಇಲಾಖೆಯ 2100 ಫಲಾನುಭವಿಗಳಿಗೆ ಸೋಂಕು ನಿವರಣಾ ಕಿಟ್, ಡಿ.ದೇವರಾಜು ಅರಸು ನಿಗಮದಿಂದ ಮಹಿಳೆಯರಿಗೆ 200 ಹೊಲಿಗೆ ಯಂತ್ರ, ಟ್ಯಾಕ್ಸಿ, ಕಾರ್ಮಿಕ ಇಲಾಖೆಯಿಂದ ವೆಲ್ಡಿಂಗ್ ಟೂಲ್ ಕಿಟ್ ಸೇರಿದಂತೆ ಜಿಲ್ಲಾಡಳಿತ ಗುರುತಿಸಿರುವ 1.50 ಲಕ್ಷ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳನ್ನು ಹಂಚಿಕೆ ಮಾಡಲಾಗುವುದು. ಅರ್ಹ ಫಲಾನುಭವಿಗಳಿಗೆ ಕಂದಾಯ ಇಲಾಖೆಯಿಂದ 2000 ಹಕ್ಕು ಪತ್ರಗಳನ್ನು ವಿತರಿಸಲಾಗುವುದು. ಎಂದು ಮಾಹಿತಿ ನೀಡಿದರು.
ನಮ್ಮ ಸರ್ಕಾರವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದೇವೆ ಎಂಬ ಸಂದೇಶ ಜನಸಮೂಹಕ್ಕೆ ರವಾನೆಯಾಗಬೇಕು. ಸರ್ಕಾರದ ಮೇಲೆ ಟೀಕೆ ಟಿಪ್ಪಣಿಗಳನ್ನು ಮಾಡುವವರಿಗೆ ಈ ಕಾರ್ಯಕ್ರಮ ಉತ್ತರವಾಗಲಿದೆ ಎಂದರು.
ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ನಮ್ಮ ಸರ್ಕಾರವು ಮಹಿಳಾ ಸಬಲೀಕರಣಕ್ಕೆ ಹೆಚ್ಚು ಪ್ರಾತಿನಿಧ್ಯ ನೀಡಿದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವ ಉದ್ದೇಶದಿಂದ ಸಂಜೀವಿನಿ ಕಾರ್ಯಕ್ರಮದಡಿ ಮಹಿಳಾ ಸ್ವಸಹಾಯ ಸಂಘಗಳ 40,000 ಮಹಿಳೆಯರಿಗೆ 40 ಕೋಟಿ ರೂ. ಗಳ ಸಾಲ ಸೌಲಭ್ಯ ನೀಡಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ಹಲವು ವರ್ಷಗಳ ಬೇಡಿಕೆಯಾದ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ, ಕೆಎಎಸ್ ಸಿಎ ಅಧ್ಯಕ್ಷ ಎ.ರಘುರಾಮ್ ಭಟ್, ಕಾರ್ಯದರ್ಶಿ ಶಂಕರ್ ಸೇರಿದಂತೆ ಮತ್ತಿತರರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸಲು ತುಮಕೂರು ತಾಲ್ಲೂಕು ಬೆಳ್ಳಾವಿ ಹೋಬಳಿ ಪಿ.ಗೊಲ್ಲಹಳ್ಳಿ ಗ್ರಾಮದಲ್ಲಿ 41 ಎಕರೆ ಭೂಮಿಯನ್ನು ಕೆಐಎಡಿಬಿ ವತಿಯಿಂದ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ಗೆ ಹಸ್ತಾಂತರಿಸಲಾಗಿದ್ದು, 150 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುವ ಕ್ರಿಕೆಟ್ ಕ್ರೀಡಾಂಗಣ ಕಾಮಗಾರಿಯು 2 ವರ್ಷದೊಳಗೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಹಕಾರ ಸಚಿವ ಕೆ.ಎನ್.ರಾಜಣ್ಣ, ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಜಿ.ಪ್ರಭು, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಸೇರಿದಂತೆ ಮತ್ತಿತರರು ಹಾಜರಿದ್ದರು.
ಜಾತಿವಾರು ದತ್ತಾಂಶ ಸಂಗ್ರಹಿಸಲು ನಾಗಮೋಹನ್ ದಾಸ್ ಸಮಿತಿ ರಚಿಸಲಾಗಿದ್ದು, ಸಮಿತಿ ವರದಿ ಬಂದ ನಂತರ ವಿಳಂಬ ಮಾಡದೆ ರಾಜ್ಯದಲ್ಲಿ ಒಳ ಮೀಸಲಾತಿಯನ್ನು ತಪ್ಪದೆ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ಮುಖ್ಯಮಂತ್ರಿಗಳನ್ನು ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳನ್ನಾಗಿ ನೇಮಕ ಮಾಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಯಿಸಿದ ಸಚಿವರು, ರಾಜ್ಯದಲ್ಲಿ ಈವರೆಗೂ ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳಾಗಿ ರಾಜ್ಯಪಾಲರು ಕಾರ್ಯನಿರ್ವಹಿಸುತ್ತಿದ್ದರು. ಗುಜರಾತ್ ನಲ್ಲಿ ಮುಖ್ಯ ಮಂತ್ರಿಗಳನ್ನು ವಿಶ್ವವಿದ್ಯಾನಿಲಯಗಳ ಕುಲಾಧಿಪತಿಗಳನ್ನಾಗಿ ನೇಮಕ ಮಾಡಲಾಗಿದ್ದು, ರಾಜ್ಯದಲ್ಲಿಯೂ ಸಹ ಇನ್ನೂ ಮುಂದೆ ಮುಖ್ಯಮಂತ್ರಿಗಳು ಕುಲಾಧಿಪತಿಗಳಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx