ಚಿಕ್ಕಮಗಳೂರು: ಜಿಲ್ಲೆಯ ಹೆಬ್ಬಳ್ಳಿ ಗ್ರಾಮದಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಸೀರೆಯ ಜೋಕಾಲಿ ಆಕಸ್ಮಿಕವಾಗಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ಉಸಿರುಗಟ್ಟಿ ಸಾವನ್ನಪ್ಪಿರುವ ಧಾರುಣ ಘಟನೆ ಸಂಭವಿಸಿದೆ.
ಮೃತಪಟ್ಟ ಬಾಲಕಿಯನ್ನು ಲೇಖನಾ (10) ಎಂದು ಗುರುತಿಸಲಾಗಿದೆ. ಈಕೆ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಬಾಲಕಿಯ ಪೋಷಕರು ಕೂಲಿ ಕೆಲಸಕ್ಕೆ ತೆರಳಿದ್ದ ಸಮಯದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ಮನೆಯಲ್ಲಿ ಕಟ್ಟಲಾಗಿದ್ದ ಸೀರೆಯ ಜೋಕಾಲಿಯಲ್ಲಿ ಲೇಖನಾ ಆಟವಾಡುತ್ತಿದ್ದಳು.
ಆಟವಾಡುತ್ತಿದ್ದಾಗ ಅನಿರೀಕ್ಷಿತವಾಗಿ ಜೋಕಾಲಿ ತಿರುಗಿ ಬಾಲಕಿಯ ಕಾಲಿಗೆ ಸಿಲುಕಿಕೊಂಡಿದೆ. ಇದನ್ನು ಬಿಡಿಸಿಕೊಳ್ಳಲು ಪ್ರಯತ್ನಿಸಿದಾಗ ಸೀರೆಯ ಪಟ್ಟಿ ಕುತ್ತಿಗೆಗೆ ಬಿಗಿದುಕೊಂಡಿದೆ ಎನ್ನಲಾಗಿದೆ. ಇದರಿಂದಾಗಿ ಬಾಲಕಿ ಉಸಿರುಗಟ್ಟಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿದ್ದಾಳೆ.
ಕೆಲಸ ಮುಗಿಸಿ ಮನೆಗೆ ಮರಳಿದ ಪೋಷಕರು ಮಗಳ ಸ್ಥಿತಿಯನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ. ಕೂಡಲೇ ಆಕೆಯನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಬಾಲಕಿ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.
“ತಂದೆ-ತಾಯಿ ಕೂಲಿ ಕೆಲಸಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಜೋಕಾಲಿ ತಿರುಗಿ ಮೊದಲು ಕಾಲಿಗೆ, ನಂತರ ಕುತ್ತಿಗೆಗೆ ಬಿಗಿದುಕೊಂಡಿದ್ದರಿಂದ ಈ ಅನಾಹುತ ಸಂಭವಿಸಿದೆ. ನಾವು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದೇವೆ.”
— ಠಾಣಾಧಿಕಾರಿ, ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆ.
ಒಂದೇ ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಹೆಬ್ಬಳ್ಳಿ ಗ್ರಾಮದಲ್ಲಿ ಶೋಕದ ಛಾಯೆ ಆವರಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


