ಚಿಕ್ಕನಾಯಕನಹಳ್ಳಿ: ತಾಲೂಕಿನ ಯಾವುದೇ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ತಾಲೂಕು ಆಡಳಿತ ಸೌಧದಲ್ಲಿ ಸೋಮವಾರ ನಡೆದ ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮಗಳಲ್ಲಿ ನೀರು ವ್ಯರ್ಥವಾಗಿ ಹರಿಯದಂತೆ ನೋಡಿಕೊಳ್ಳುವುದು ವಾಟರ್ಮನ್ಗಳ ಜವಾಬ್ದಾರಿ. ಈ ಬಗ್ಗೆ ಅಧಿಕಾರಿಗಳು ನಿರಂತರ ನಿಗಾ ಇಡಬೇಕು ಮತ್ತು ನೀರಿನ ಲಭ್ಯತೆಯ ಬಗ್ಗೆ ವಾರಕ್ಕೊಮ್ಮೆ ವರದಿ ನೀಡಬೇಕು. ನೀರಿನ ಅಭಾವ ತೀವ್ರವಾಗಿರುವ ಕಡೆಗಳಲ್ಲಿ ಅಗತ್ಯವಿದ್ದರೆ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆಗೆ ಪಡೆದು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೀರು ಪೂರೈಸಲು ಕ್ರಮ ಕೈಗೊಳ್ಳಬೇಕು ಅಂತಾ ಸೂಚನೆ ನೀಡಿದರು.
ಪ್ರಸ್ತುತ ಜಾತ್ರೆಗಳ ಸೀಸನ್ ಆಗಿರುವುದರಿಂದ ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ಹಾಗೂ ಪಂಚಾಯಿತಿ ಅಧಿಕಾರಿಗಳು ಜಾತ್ರಾ ಸ್ಥಳಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದರು.
ಜಾನುವಾರುಗಳಿಗೆ ಮೇವು: ಬೇಸಿಗೆಯ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆಯಾಗದಂತೆ ಪಶುಪಾಲನಾ ಇಲಾಖೆ ಗಮನಹರಿಸಬೇಕು. ಪ್ರಸ್ತುತ ತಾಲೂಕಿನಲ್ಲಿ ಮುಂದಿನ 49 ವಾರಗಳಿಗೆ ಆಗುವಷ್ಟು ಮೇವಿನ ಸಂಗ್ರಹವಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪ್ರಸ್ತುತ ನೀರಿನ ಸಮಸ್ಯೆ ಎದುರಿಸುತ್ತಿರುವ ಹೊನ್ನೇಬಾಗಿ, ಸಿದ್ದನಕಟ್ಟೆ ಹಾಗೂ ದಸೂಡಿಯ ಮಾಳಮ್ಮನಹಟ್ಟಿ ಗ್ರಾಮಗಳ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ತಹಶೀಲ್ದಾರ್ ಮಮತಾ ಎಂ., ಇಒ ದೊಡ್ಡಸಿದ್ದಯ್ಯ ಹಾಗೂ ವಿವಿಧ ಇಲಾಖೆಗಳ ಎಇಇಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


