ತುಮಕೂರು: ಎಸ್. ಎಸ್. ಎಲ್. ಸಿ. ಪರೀಕ್ಷಾ ಕೇಂದ್ರಗಳಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರು, ಸದಸ್ಯರ ಪರಿಶೀಲನಾ ಭೇಟಿಯನ್ನು ನಿರ್ಬಂಧಿಸಿರುವ ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಿಗೆ ನಾಳೆ ಬೆಳಗ್ಗೆ 11 ಗಂಟೆಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಮನ್ಸ್ ಜಾರಿ ಮಾಡಲಾಗಿದೆ.
ರಾಜ್ಯದಲ್ಲಿ ಪ್ರಸ್ತುತ ಎಸ್.ಎಸ್.ಎಲ್.ಸಿ. ನಡೆಯುತ್ತಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಕಲ್ಪಿಸಿರುವ ಮಕ್ಕಳ ಸ್ನೇಹಿ ವಾತಾವರಣ ಹಾಗೂ ವ್ಯವಸ್ಥೆಗಳನ್ನು ಅವಲೋಕಿಸಲು ಭೇಟಿ ನೀಡುವ ಬಗ್ಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಕೆ.ಟಿ.ತಿಪ್ಪೇಸ್ವಾಮಿ ಅವರು ತುಮಕೂರು ಜಿಲ್ಲೆಯ ಮಧುಗಿರಿ ಶೈಕ್ಷಣಿಕ ಜಿಲ್ಲೆ ಸಿರಾ ತಾಲ್ಲೂಕಿನ ಆಯ್ದ ಕೆಲವು ಪರೀಕ್ಷಾ ಕೇಂದ್ರಗಳಿಗೆ ದಿ.30/03/2024 ರಂದು ಭೇಟಿ ನೀಡಲು ಮುಂದಾಗಿದ್ದರು. ಈ ಬಗ್ಗೆ ತಿಳಿಸಲು ಜಿಲ್ಲೆಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕರನ್ನು ಹಾಗೂ ಸಿರಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ದೂರವಾಣಿಯಲ್ಲಿ ಸಂಪರ್ಕಿಸಿದಾಗ ‘ನಮ್ಮ ಇಲಾಖೆಯ ಆಯುಕ್ತರು ಪರೀಕ್ಷಾ ಕೇಂದ್ರಗಳಿಗೆ ಮಕ್ಕಳ ಹಕ್ಕುಗಳ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ಭೇಟಿಗೆ ಅವಕಾಶ ನೀಡಬಾರದು, ನಾವು ಅನುಮತಿ ನೀಡಿರುವುದಿಲ್ಲ’ ಎಂದು ಮೌಖಿಕ ಆದೇಶ ನೀಡಿದ್ದು, ಅದರಂತೆ ತಾವು ಅನುಮತಿ ಪಡೆದು ಭೇಟಿ ನೀಡಬೇಕೆಂದು ತಿಳಿಸಿದ್ದರು.
ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಸದಸ್ಯರಾದ ಕೆ.ಟಿ.ತಿಪ್ಪೇಸ್ವಾಮಿ ಅವರು ಪತ್ರ ಬರೆದು ಭೇಟಿಗೆ ನಿರ್ಬಂಧ ಹೇರಿರುವ ವಿಚಾರವನ್ನು ವಿವರಿಸಿದ್ದರು. ಇದರ ಬೆನ್ನಲ್ಲೇ ಇದೀಗ ನಾಳೆ ಬೆಳಗ್ಗೆ 11 ಗಂಟೆಗೆ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಶಾಲಾ ಮತ್ತು ಸಾಕ್ಷರತಾ ಇಲಾಖೆಯ ಆಯುಕ್ತರಿಗೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸಮನ್ಸ್ ಜಾರಿ ಮಾಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


