ಕರ್ನಾಟಕ ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿಯ ಅಧಿಕಾರದ ಪಾರಪತ್ಯವನ್ನು ಮುಂದುವರೆಸುವ ನಿಟ್ಟಿನಲ್ಲಿ ಪಕ್ಷದ ವರಿಷ್ಟರು ಯೋಜನೆಯನ್ನು ರೂಪಿಸಿದ್ದು, ಇಂದು ಮಧ್ಯ ಕರ್ನಾಟಕದ ಜಿಲ್ಲೆ ಐತಿಹಾಸಿಕ ಕೋಟೆ ನಗರಿ ಚಿತ್ರದುರ್ಗದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ನಗರ ಸ್ಥಳೀಯ ಸಂಸ್ಥೆಗಳ ಸದಸ್ಯರ ರಾಜ್ಯಮಟ್ಟದ ಜನಪ್ರತಿನಿಧಿಗಳ ಸಮಾವೇಶವನ್ನು ನಡೆಸುತ್ತಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ, ವಿಧಾನಸಭೆ ಚುನಾವಣೆಗೆ ಅಣಿಯಾಗಲು ಬಿಬಿಎಂಪಿ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಅಧಿಕಾರ ವಿಕೇಂದ್ರೀಕರಣದೊಂದಿಗೆ ಗ್ರಾಮಗಳ ಸಬಲೀಕರಣದ ಘೋಷ ವಾಕ್ಯದಲ್ಲಿ ಅಭಿವೃದ್ಧಿ ಸಮೀಕರಣ ಮೂಲಕ ಬಿಜೆಪಿ ಅಧಿಕಾರ ಚುಕ್ಕಾಣಿ ಹಿಡಿಯಲು ತಯಾರಿ ನಡೆಸಲು ಇಂದಿನ ಕೋಟೆ ನಗರಿಯಲ್ಲಿ ಸಮಾವೇಶ ಆಯೋಜಿಸಲಾಗಿದೆ.
ಚಿತ್ರದುರ್ಗದ ಮುರುಘಾ ಮಠದಲ್ಲಿನ ಅನುಭವ ಮಂಟಪದಲ್ಲಿ ಆಯೋಜಿಸಿರುವ ಬೃಹತ್ ಸಮಾವೇಶವು ಸಂಜೆ ೪ ಗಂಟೆಗೆ ಪ್ರಾರಂಭಗೊಳ್ಳಲಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಉದ್ಘಾಟನೆ ಮಾಡಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವರಾದ ಎ.ನಾರಾಯಣಸ್ವಾಮಿ, ಬಿ.ಸಿ.ಪಾಟೀಲ್, ಮುರುಗೇಶ್ ನಿರಾಣಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳನ್ನು ಪ್ರತಿನಿಧಿಸುವ ವಿಧಾನ ಪರೀಷತ್ ಸದಸ್ಯರು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿನ ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಅಗಮನಕ್ಕಾಗಿ ಜಿಲ್ಲಾ ಸಮಿತಿಯವರು ಕಳೆದ ೧ ವಾರದಿಂದಲೇ ನಗರ ಹಾಗೂ ವೇದಿಕೆಯನ್ನು ಶೃಂಗಾರ ಮಾಡುವ ಕಾರ್ಯದಲ್ಲಿ ಮುಳುಗಿದ್ದು, ನಗರ ಸೇರಿದಂತೆ ಮುರುಘಮಠ ಕೇಸರಿ ಭಾವುಟಗಳಿಂದ ಕಂಗೋಳಿಸುತ್ತಿದೆ.
ನಡ್ಡಾ ಅವರ ಅಗಮನದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ. 5 ಡಿವೈಎಸ್ಪಿ, 14 ಸಿಪಿಐ, 30 ಪಿಎಸ್‌ಐ, 4 ಡಿಎಆರ್ ಹಾಗೂ 2 ಕೆ ಎಸ್ ಆರ್ ಪಿ ತುಕಡಿಗಳನ್ನು ನಿಯೋಜಿಸಿದ್ದಾರೆ.
ವರದಿ: ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB


