ಚಿತ್ರದುರ್ಗ:ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಲಾರಿ ಮತ್ತು ಖಾಸಗಿ ಬಸ್ ನಡುವೆ ಸಂಭವಿಸಿದ ಭೀಕರ ಡಿಕ್ಕಿಯಿಂದಾಗಿ ಬಸ್ ಬೆಂಕಿಗಾಹುತಿಯಾಗಿದ್ದು, 9ಕ್ಕೂ ಹೆಚ್ಚು ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಬೆಂಗಳೂರಿನಿಂದ ಶಿವಮೊಗ್ಗದತ್ತ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ, ಹಿರಿಯೂರಿನಿಂದ ಬೆಂಗಳೂರು ಕಡೆಗೆ ಸಾಗುತ್ತಿದ್ದ ಲಾರಿಯೊಂದು ಡಿವೈಡರ್ ಹಾರಿ ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಬಸ್ ಬೆಂಕಿಯ ಕೆನ್ನಾಲಗೆಗೆ ಸಿಲುಕಿದೆ. ಬಸ್‌ನಲ್ಲಿ ಒಟ್ಟು 29 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ದುರಂತದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಯಲ್ಲಿ ಲಾರಿ ಚಾಲಕ ಕುಲದೀಪ್ ಕೂಡ ಮೃತಪಟ್ಟಿದ್ದಾನೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಎಸ್ಪಿ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಸ್ತೆಯುದ್ದಕ್ಕೂ ಕಿಲೋಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪೊಲೀಸರು ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


