ತುಮಕೂರು: ಜಿಲ್ಲೆಯಾದ್ಯಂತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಫೆಬ್ರವರಿ 15ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ.
ನಿಷೇಧಾಜ್ಞೆಯು ಫೆಬ್ರವರಿ 15ರ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ.
ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ ಫೋಟೋಗಳನ್ನು ತೆಗೆದು ವಾಟ್ಸಾಪ್ ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಕಳುಹಿಸಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿ ಮಾಡಲು ಅವಕಾಶವಿರುವುದರಿಂದ ಪರೀಕ್ಷೆಯ ಮುಖ್ಯ ಅಧೀಕ್ಷಕರು ಕ್ಯಾಮರಾ ಹೊಂದಿರುವ ಸಾಮಾನ್ಯ ಮೊಬೈಲ್ ಇರಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಉಳಿದ ಎಲ್ಲಾ ಪರೀಕ್ಷಾ ಸಿಬ್ಬಂದಿ/ವಿದ್ಯಾರ್ಥಿಗಳು ಮೊಬೈಲ್ ತರುವುದು/ಉಪಯೋಗಿಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆಗಳ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳಿಗೆ ಉತ್ತೇಜನ ನೀಡುವಂತಹ ವ್ಯಕ್ತಿಗಳು ಕಂಡುಬಂದಲ್ಲಿ ಅವರ ವಿರುದ್ಧ ಅಗತ್ಯ ಮುಂಜಾಗ್ರತಾ ಕ್ರಮಕೈಗೊಳ್ಳಲಾಗುವುದು ಎಂದು ಅವರು ಸೂಚಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4