ಬೆಂಗಳೂರು: ಯುವನಿಧಿ ಯೋಜನೆಯಡಿ ನೋಂದಣಿಗೊಂಡ ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗೃಹಕಚೇರಿ ಕೃಷ್ಣಾದಲ್ಲಿ ಗುರುವಾರ ನಡೆದ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಯುವ ನಿಧಿ ಯೋಜನೆ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದು, ಇದರ ಅಡಿಯಲ್ಲಿ ಸರ್ಕಾರವು ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಪಡೆದವರಿಗೆ ಆರ್ಥಿಕ ನೆರವು ನೀಡುತ್ತದೆ. ಈ ಯೋಜನೆಯಡಿಯಲ್ಲಿ 1,96,000 ಯುವಕರು ನೋಂದಾವಣಿ ಮಾಡಿಕೊಂಡಿದ್ದು, ಈವರೆಗೂ 1,61,883 ಯುವಕರಿಗೆ 216.38 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದೆ. ಯೋಜನೆಯಡಿ ಅರ್ಹ ಅಭ್ಯರ್ಥಿಗಳ ನೋಂದಣಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.
ಪ್ರಸ್ತುತ ಬಜೆಟ್ ನಲ್ಲಿ ಇಲಾಖೆಗೆ ರೂ.1864 ಕೋಟಿ ಅನುದಾನ ಹಂಚಿಕೆ ಮಾಡಲಾಗಿದ್ದು, ಇದುವರೆಗೆ ರೂ. 1235 ಕೋಟಿ ವೆಚ್ಚವಾಗಿದೆ. ರಾಜ್ಯದಲ್ಲಿ 50 ವರ್ಷ ಪೂರ್ಣಗೊಳಿಸಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಪಾರಂಪರಿಕ ಸಂಸ್ಥೆಗಳೆಂದು ಘೋಷಿಸಿ ಉನ್ನತೀಕರಣಕ್ಕಾಗಿ ರೂ.100 ಕೋಟಿ ಒದಗಿಸಲಾಗಿದ್ದು, ಈ ಕಾಮಗಾರಿಯನ್ನು ಆದಷ್ಟು ಬೇಗನೆ ಪೂರ್ಣಗೊಳಿಸಬೇಕು. ಐಟಿಐ ಪ್ರವೇಶಾತಿಯನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕೌಶಲ್ಯಾಭಿವೃದ್ಧಿ ಆದರೆ ಮಾತ್ರ ಉದ್ಯೋಗ ಸಿಗಲು ಸಾಧ್ಯವಿದೆ. ಕೌಶಲ್ಯ ನೀಡಿಕೆ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಅನುಷ್ಠಾನಗೊಳಿಸಬೇಕು. ಯುವನಿಧಿ ಯೋಜನೆಯಡಿ ನೋಂದಣಿಗೊಂಡವರಿಗೆ ಆದ್ಯತೆ ಮೇರೆಗೆ ಕೌಶಲ್ಯ ತರಬೇತಿ ನೀಡಬೇಕು ಎಂದು ಅವರು ಸೂಚನೆ ನೀಡಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx