“ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಭರವಸೆ ನೀಡಿದ್ದ ಪ್ರಧಾನಿ ಮೋದಿ ವಿದ್ಯಾರ್ಥಿಗಳು, ಯುವಜನರ ಮತ ಗಳಿಸಿದರು. ಈ ಲೆಕ್ಕದಲ್ಲಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿತ್ತು. ಆದರೆ, ಮೋದಿಯವರು ಇರುವ ಉದ್ಯೋಗವನ್ನೂ ಕಸಿದುಕೊಂಡ ಕಾರಣ ನಿರುದ್ಯೋಗ ಪ್ರಮಾಣ ದೇಶದಲ್ಲಿ ಶೇ 8.40ಕ್ಕೆ ಏರಿಕೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರದಿಂದ ಆಯೋಜಿಸಿರುವ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಮತ್ತು ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಿರುದ್ಯೋಗಿ ಯುವಕರಿಗೆ ಯುವನಿಧಿ ಸಹಾಯಧನ ಕೊಡುವ ಜೊತೆಗೆ ಉದ್ಯೋಗ ಸೃಷ್ಟಿಸಲಾಗುವುದು ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದು ಹೇಳಿದರು.
“ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014ರಲ್ಲಿ ಪ್ರಧಾನಿ ಮೋದಿ ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀನಿ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದ್ದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಉದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ, ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ ಶೇ. 8.40 ಏರಿಕೆಯಾಗಿದೆ ಎಂದು ಅಂಕಿ ಅಂಶಗಳ ಸಮೇತ ವಿವರಿಸಿದರು.
ನಾವು ಯುವನಿಧಿಯನ್ನೂ ಕೊಡ್ತೀವಿ, ಉದ್ಯೋಗವನ್ನೂ ಸೃಷ್ಟಿಸುತ್ತೇವೆ. ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ನಮ್ಮ ಸರ್ಕಾರ ವಿದ್ಯಾರ್ಥಿ ಯುವ ಜನರಿಗೆ ನೀಡುವ ಅಭಯ ಎಂದರು. ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ ಜಿಟಿಡಿಸಿಗಳ ಜೊತೆಗೆ ಹೊಸದಾಗಿ ಇನ್ನಷ್ಟು ಜಿಟಿಡಿಸಿಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಘೋಷಣೆ ಮಾಡಿದರು.
ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


