ತುಮಕೂರು: ತುಮಕೂರು ಜಿಲ್ಲೆಯ ಗುಬ್ಬಿ ಬಳಿ ಹೇಮಾವತಿ ಎಕ್ಸ್ ಪ್ರೆಸ್ ಲಿಂಕ್ ಕಾಲುವೆ ಯೋಜನೆ ವಿರೋಧಿಸಿ ರೈತ ಸಂಘಟನೆಗಳು, ವಿರೋಧ ಪಕ್ಷ ಬಿಜೆಪಿ ಮತ್ತು ಜೆಡಿಎಸ್ ಶನಿವಾರ ಬೃಹತ್ ಪ್ರತಿಭಟನೆ ನಡೆಸಿದವು. ನಂತರ ಜಿಲ್ಲಾಡಳಿತ ಯೋಜನಾ ಕಾರ್ಯವನ್ನು ಸ್ಥಗಿತಗೊಳಿಸುವುದಾಗಿ ಭರವಸೆ ನೀಡಿದ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಜಿ. ಪರಮೇಶ್ವರ ಅವರೊಂದಿಗೆ ಮಾತನಾಡಿದ್ದು, ಸಮಸ್ಯೆಯನ್ನು ಪರಿಹರಿಸುವಂತೆ ಸೂಚಿಸಿರುವುದಾಗಿ ಹೇಳಿದರು. ಹೇಮಾವತಿ ನದಿ ಕೆನಾಲ್ ಯೋಜನೆಗೆ ಅಡ್ಡಿಪಡಿಸುವ ಕೆಲಸ ಆಗಬಾರದು. ಸಮಸ್ಯೆಗಳಿದ್ದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹಸಚಿವರು ಬಗೆಹರಿಸಲು ಸೂಚನೆ ನೀಡಿರುವುದಾಗಿ ಸಿಎಂ ತಿಳಿಸಿದರು.
ಇನ್ನೂ ಈ ಸಂಬಂಧ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ, “ಸರ್ಕಾರವು ಕಾಲುವೆ ನಿರ್ಮಾಣದ ಬಗ್ಗೆ ನಿರ್ಧರಿಸಿ ಸುಮಾರು 1,000 ಕೋಟಿ ರೂ.ಗಳ ಕಾಮಗಾರಿಗೆ ಅನುಮೋದನೆ ನೀಡಿದೆ. ಮೂರು ತಿಂಗಳ ಹಿಂದೆ ನಾವು ಕಾಮಗಾರಿಯನ್ನು ಪ್ರಾರಂಭಿಸಲು ಪ್ರಯತ್ನಿಸಿದಾಗ, ಬಿಜೆಪಿ ಅದನ್ನು ಅವೈಜ್ಞಾನಿಕ ಎಂದು ವಿರೋಧಿಸಿತು. ನಂತರ ನೀರಾವರಿ ಸಚಿವ ಮತ್ತು ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಹಾಜರಿದ್ದರು. ನಿರ್ಧಾರ ತೆಗೆದುಕೊಳ್ಳುವ ಮೊದಲು ತಾಂತ್ರಿಕ ಸಮಿತಿ ರಚಿಸಿ ಕಾರ್ಯಸಾಧ್ಯತೆಯ ಬಗ್ಗೆ ಅವರ ಅಭಿಪ್ರಾಯವನ್ನು ಪಡೆಯಲು ಸಭೆಯಲ್ಲಿ ನಿರ್ಧರಿಸಲಾಯಿತು ಎಂದರು.
ಯೋಜನೆಗೆ ಅನುಮೋದನೆ ನೀಡಿದ ತಾಂತ್ರಿಕ ಸಮಿತಿಯ ವರದಿಯ ಆಧಾರದ ಮೇಲೆ, ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಅವರು ಮತ್ತೆ ಕಾಮಗಾರಿಯನ್ನು ನಿಲ್ಲಿಸಲು ಪ್ರತಿಭಟಿಸುತ್ತಿದ್ದಾರೆ. ಇದು ಕೇವಲ ರಾಜಕೀಯ. ನಾವು ಅವರೊಂದಿಗೆ ಮಾತನಾಡಿ ಮುಂದುವರಿಯುತ್ತೇವೆ ಎಂದು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW