ತುಮಕೂರು: ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿ ನೀಡಲು ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗದ ಶಿಫಾರಸ್ಸಿನಂತೆ ಜಿಲ್ಲೆಯಲ್ಲಿ ಮೇ 5 ರಿಂದ 17ರವರೆಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷಾ ಕಾರ್ಯದಲ್ಲಿ ಪ್ರತೀ ಮನೆಗೆ ಭೇಟಿ ನೀಡಿ ನೈಜ ಮಾಹಿತಿಯನ್ನು ಸಂಗ್ರಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಗಣತಿದಾರರಿಗೆ ಸೂಚನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಶಿಕ್ಷಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ನಗರದ ಕೋತಿ ತೋಪು ವೃತ್ತದ ಬಳಿ ಸೋಮವಾರ ಹಮ್ಮಿಕೊಂಡಿದ್ದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ–2025ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಪರಿಶಿಷ್ಟ ಜಾತಿಗಳ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸ್ಥಿತಿ–ಗತಿಗಳ ವಾಸ್ತವಾಂಶವನ್ನು ಅರಿಯಲು ರಾಜ್ಯದಾದ್ಯಂತ ಈ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ದೇಶದಲ್ಲಿಯೇ ಪ್ರಥಮ ಬಾರಿಗೆ ರಾಜ್ಯದಾದ್ಯಂತ ಹಮ್ಮಿಕೊಂಡಿರುವ ಜಾತಿ ಸಮೀಕ್ಷೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈಗಾಗಲೇ ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.
ಜಿಲ್ಲೆಯ ನಗರ ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿ ಪರಿಶಿಷ್ಟ ಜಾತಿಯ ಉಪಜಾತಿಗಳ ಸಮೀಕ್ಷೆ ನಡೆಸಲು 3,000 ಶಿಕ್ಷಕರನ್ನು ಗಣತಿದಾರರನ್ನಾಗಿ ನಿಯೋಜಿಸಲಾಗಿದೆ. ಸಮೀಕ್ಷೆಯು 3 ಹಂತದಲ್ಲಿ ನಡೆಯಲಿದ್ದು, ಮೊದಲ ಹಂತದಲ್ಲಿ ಗಣತಿದಾರರು ಮೇ 5 ರಿಂದ 17ರವರೆಗೆ ಮನೆ-ಮನೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
2ನೇ ಹಂತದಲ್ಲಿ ಮೇ 19 ರಿಂದ 21ರವರೆಗೆ ಆಯಾ ಮತಗಟ್ಟೆಗಳಲ್ಲಿ ಸಮೀಕ್ಷೆ ನಡೆಸಲಾಗುವುದು. ಪ್ರವಾಸದಲ್ಲಿರುವವರು, ವಿವಿಧ ಕಾರಣಗಳಿಂದ ಮನೆಯಿಂದ ಹೊರಗಿರುವವರು ಈ ಹಂತದಲ್ಲಿ ಸಂಬAಧಿಸಿದ ಮತಗಟ್ಟೆಗಳಿಗೆ ಭೇಟಿ ನೀಡಿ ತಮ್ಮ ಜಾತಿಯ ವಿವರಗಳನ್ನು ದಾಖಲಿಸಬಹುದು ಎಂದು ತಿಳಿಸಿದರು.
3ನೇ ಹಂತದಲ್ಲಿ ಪರಿಶಿಷ್ಟ ಜಾತಿಯ ಉಪಜಾತಿ ವಿವರವನ್ನು ಆನ್ ಲೈನ್ ಮೂಲಕ ಸ್ವಯಂ ಘೋಷಿಸಿಕೊಳ್ಳಲು ಮೇ 19 ರಿಂದ 23ರವರೆಗೆ ಕಾಲಾವಕಾಶ ನೀಡಲಾಗುವುದು. ಸಮೀಕ್ಷಾ ಅವಧಿಯಲ್ಲಿ ಸ್ವಗ್ರಾಮಕ್ಕೆ ಭೇಟಿ ನೀಡಲು ಸಾಧ್ಯವಾಗದೇ ಇರುವವರು 3ನೇ ಹಂತದ ಸಮೀಕ್ಷೆಯಲ್ಲಿ ಪಾಲ್ಗೊಂಡು ಮಾಹಿತಿ ನೀಡುವ ಮೂಲಕ ಸಮೀಕ್ಷಾ ಕಾರ್ಯವನ್ನು ಯಶಸ್ವಿಗೊಳಿಸಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಗಣತಿದಾರರು ಮನೆ-ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಕುಟುಂಬ ಸದಸ್ಯರು ತಮ್ಮ ಆಧಾರ್ ಮತ್ತು ಪಡಿತರ ಚೀಟಿಯನ್ನು ಹಾಜರುಪಡಿಸಿ ಜಾತಿಯ ಬಗ್ಗೆ ನಿಖರ ಮಾಹಿತಿಯನ್ನು ನೀಡಿ ಸಹಕರಿಸಬೇಕು. ಯಾವುದೇ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಇನ್ನಿತರೆ ದಾಖಲೆಗಳ ಅಗತ್ಯವಿರುವುದಿಲ್ಲ. ಜಾತಿ ಸಮೀಕ್ಷೆಯಲ್ಲಿ ಮಾಹಿತಿ ನೀಡುವುದರಿಂದ ಸರ್ಕಾರದ ಸೌಲಭ್ಯಗಳಿಂದ ಯಾರೂ ವಂಚಿತರಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದರು.
ಜಾತಿ ಗಣತಿ ಸಮೀಕ್ಷೆಯನ್ನು ಪರಿಣಾಮಕಾರಿಯಾಗಿ ನಡೆಸಲು ಜಿಲ್ಲಾಡಳಿತದಿಂದ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ಈಗಾಗಲೇ ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಮಾಸ್ಟರ್ ಟ್ರೆöÊನರ್ಗಳಿಗೆ ತರಬೇತಿ ನೀಡಲಾಗಿದೆ. ಯಾವುದೇ ಲೋಪದೋಷವಾಗದಂತೆ ಸಮೀಕ್ಷಾ ಕಾರ್ಯ ನಡೆಸಲು ನಿಯೋಜಿತ ಅಧಿಕಾರಿ ಹಾಗೂ ಸಿಬ್ಬಂದಿಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ಪರಿಶಿಷ್ಟ ಜಾತಿಯಲ್ಲಿ 101 ಉಪಜಾತಿಗಳಿದ್ದು, ಗಣತಿದಾರರು ಸಮೀಕ್ಷೆ ನಡೆಸಲು ಮನೆ-ಮನೆಗೆ ಭೇಟಿ ನೀಡಿದಾಗ ಪರಿಶಿಷ್ಟ ಜಾತಿ ಸಮುದಾಯದವರು ತಮ್ಮ ಉಪ ಜಾತಿಗಳ ನಿಖರ ಮಾಹಿತಿಯನ್ನು ನೀಡುವ ಮೂಲಕ ವೈಜ್ಞಾನಿಕವಾಗಿ ಸಮೀಕ್ಷೆ ನಡೆಸಲು ಸಹಕರಿಸಬೇಕು. ಜಿಲ್ಲೆಯ ಪ್ರತಿಯೊಬ್ಬ ನಾಗರಿಕನೂ ಸಮೀಕ್ಷೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.
ಪರಿಶಿಷ್ಟ ಜಾತಿ ಸಮುದಾಯದ ಮುಖಂಡ ವೈ.ಕೆ. ಬಾಲಕೃಷ್ಣಪ್ಪ ಮಾತನಾಡಿ, ಪರಿಶಿಷ್ಟ ಜಾತಿಯ ಯಾವುದೇ ಕುಟುಂಬ ಹೊರಗುಳಿಯದಂತೆ ಸಮೀಕ್ಷೆ ನಡೆಸಬೇಕು. ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ನಡೆಸುವಲ್ಲಿ ಸಮುದಾಯದಿಂದ ಜಿಲ್ಲಾಡಳಿತಕ್ಕೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.
ಮತ್ತೊಬ್ಬ ಮುಖಂಡ ದೊರೈರಾಜು ಮಾತನಾಡಿ ಸುಮಾರು 30 ವರ್ಷಗಳ ಹೋರಾಟದಿಂದ ಸರ್ಕಾರವು ಈ ಸಮೀಕ್ಷೆ ನಡೆಸಲು ಮುಂದಾಗಿದೆ. ಪ.ಜಾತಿಯ ಉಪಜಾತಿಗಳ ಆಧಾರದ ಮೇಲೆ ಮೀಸಲಾತಿ ನಿಗಧಿಯಾಗುವುದರಿಂದ ಗಣತಿದಾರರು ಮನೆಗಳಿಗೆ ಭೇಟಿ ನೀಡಿದಾಗ ಗೊತ್ತುಪಡಿಸಿದ ಪ್ರಶ್ನಾವಳಿಗಳಿಗೆ ನೈಜ ಉತ್ತರವನ್ನು ನೀಡಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗೌರವ್ ಕುಮಾರ್ ಶೆಟ್ಟಿ, ಪಾಲಿಕೆ ಉಪ ಆಯುಕ್ತ ಗಿರೀಶ್, ತಹಶೀಲ್ದಾರ್ ರಾಜೇಶ್ವರಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಕೃಷ್ಣಪ್ಪ, ಗಣತಿದಾರರು, ಪ.ಜಾತಿ ಸಮುದಾಯದ ಮುಖಂಡರು, ಸಾರ್ವಜನಿಕ ಬಂಧುಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
————————————