ಬೆಂಗಳೂರು: ಭ್ರಷ್ಟಾಚಾರದ ವಿಷಯದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಆಧಾರ ರಹಿತ ಆರೋಪದಲ್ಲಿ ತೊಡಗಿದ್ದ ಕಾಂಗ್ರೆಸ್ ಪಕ್ಷವನ್ನು ಮುಖ್ಯಮಂತ್ರಿ ಬಸವರಾಜ್.ಎಸ್. ಬೊಮ್ಮಾಯಿರವರು ವಿಧಾನಸಭೆಯಲ್ಲಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.
ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿ ಮಾತನಾಡಿದರು. ಲೋಕಾಯುಕ್ತವನ್ನು ನಿಷ್ಕ್ರಿಯಗೊಳಿಸಿ ಎಸಿಬಿ ಮೂಲಕ 59 ಪ್ರಕರಣಗಳಲ್ಲಿ ಬಿ ರಿಪೋರ್ಟ್ ಸಲ್ಲಿಕೆಯಾದ ವಿಷಯವನ್ನು ಹಾಗೂ ಅರ್ಕಾವತಿ ಬಡಾವಣೆ ಹೆಸರಿನಲ್ಲಿ ಡಿ ನೋಟಿಫಿಕೇಷನ್ ಕುರಿತು ನ್ಯಾ.ಕೆಂಪಣ್ಣ ಆಯೋಗದ ವರದಿಯನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು “ನೀವು ಭ್ರಷ್ಟರಾಗಿದ್ದಲ್ಲದೇ ವ್ಯವಸ್ಥೆಯನ್ನೂ ಭ್ರಷ್ಟಗೊಳಿಸಿದ್ದೀರಿ” ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.
ನಾವು ಅಧಿಕಾರಕ್ಕೆ ಬಂದ ನಂತರ ಲೋಕಾಯುಕ್ತವನ್ನು ಪುನರ್ ಸ್ಥಾಪಿಸಿದ್ದು, ಎಲ್ಲಾ ಅಧಿಕಾರವನ್ನು ನೀಡಿದ್ದೇವೆ. ಕಾಂಗ್ರೆಸ್ ಆಡಳಿತ ಅವಧಿಯ ಎಲ್ಲಾ ಭ್ರಷ್ಟಾಚಾರದ ಪ್ರಕರಣಗಳನ್ನು ಲೋಕಾಯುಕ್ತ ತನಿಖೆಗೆ ಒಳಪಡಿಸಿ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡುವುದಿಲ್ಲ ಎಂದು ಬೊಮ್ಮಾಯಿ ಘೋಷಿಸಿದರು.
ಹೈಕೋರ್ಟ್ ನ್ಯಾಯಾಧೀಶರೇ ಲೋಕಾಯುಕ್ತವನ್ನು ಪುನಃ ಆರಂಭಿಸಿ ಎಸಿಬಿ ಯನ್ನು ಮುಚ್ಚುವಂತೆ ಆದೇಶ ನೀಡಿದ್ದಾರೆ. ತನಿಖೆ ಬಾಕಿಯಿರುವ ಪ್ರಕರಣಗಳ ಮೇಲೆ ನಿಯಂತ್ರಣ ಸಾಧಿಸುವ ಉದ್ದೇಶದಿಂದಲೇ ಎಸಿಬಿ ರಚನೆಯಾಗಿದೆ. ಇದರ ಹಿಂದೆ ಉನ್ನತ ಹುದ್ದೆಯಲ್ಲಿರುವ ರಾಜಕಾರಣಿಗಳು ಮತ್ತು ಅಧಿಕಾರಿಶಾಹಿಯನ್ನು ರಕ್ಷಿಸುವ ಉದ್ದೇಶವಿದೆ ಎಂದು ನ್ಯಾಯಾಧೀಶರು ತಮ್ಮ ತೀರ್ಪಿನಲ್ಲಿ ಉಲ್ಲೇಖಿಸಿರುವುದನ್ನು ಮುಖ್ಯಮಂತ್ರಿಗಳು ಕಾಂಗ್ರೆಸ್ ಕಟುಶಬ್ದಗಳಲ್ಲಿ ಖಂಡಿಸಿದರು.
ಕಾಂಗ್ರೆಸ್ ನ ಕೆ.ಜೆ.ಜಾರ್ಜ್, ನ್ಯಾಯಾಧೀಶರ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಬೇಕಾಗಿತ್ತು ಎಂದು ಸಲಹೆ ನೀಡಲು ಮುಂದಾದರು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಯವರು ಎಲ್ಲಾ ಭ್ರಷ್ಟಾಚಾರದ ಪ್ರಕರಣಗಳನ್ನು ಕಾಂಗ್ರೆಸ್ ಅವಧಿಯಲ್ಲಿ ಮುಚ್ಚಿಹಾಕಿದ್ದಾಗಿ ಜಾರ್ಜ್ ಅವರೇ ಒಪ್ಪಿಕೊಂಡಿದ್ದಾರೆ ಎಂದು ಟೀಕಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


