ರಾಣೆಬೆನ್ನೂರು: ಮಹಿಳಾ ಮೀಸಲಾತಿ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವನ್ನು ವಿರೋಧಿಗಳೆಂದು ಬಿಂಬಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ಕಾಂಗ್ರೆಸ್ ಎಂದಿಗೂ ಮಹಿಳಾ ಮೀಸಲಾತಿಯನ್ನು ವಿರೋಧಿಸಿಲ್ಲ. ಬದಲಾಗಿ ಬಿಜೆಪಿ ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದೆ,” ಎಂದು ಅವರು ಆರೋಪಿಸಿದ್ದಾರೆ.
ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಿಳಾ ಮೀಸಲಾತಿ ಮಸೂದೆಯನ್ನು ಕ್ಷೇತ್ರ ಮರುವಿಂಗಡನೆಯೊಂದಿಗೆ (Delimitation) ಬೆರೆಸಿರುವುದು ಸರಿಯಲ್ಲ. ಕ್ಷೇತ್ರ ಮರುವಿಂಗಡನೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಲಿದೆ. ಉತ್ತರ ಭಾರತದ ರಾಜ್ಯಗಳಲ್ಲಿ ಸೀಟುಗಳ ಸಂಖ್ಯೆ ಹೆಚ್ಚಾಗುವುದರಿಂದ ದಕ್ಷಿಣದ ಪ್ರಾತಿನಿಧ್ಯ ಕುಗ್ಗಲಿದೆ. ಈ ಅಸಮಾನತೆಯನ್ನು ನಾವು ವಿರೋಧಿಸುತ್ತಿದ್ದೇವೆಯೇ ಹೊರತು ಮಹಿಳಾ ಮೀಸಲಾತಿಯನ್ನಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲು ಸಂವಿಧಾನದ 73 ಮತ್ತು 74ನೇ ತಿದ್ದುಪಡಿ ತಂದಿದ್ದು ರಾಜೀವ್ ಗಾಂಧಿಯವರು. ಆಗ ಬಿಜೆಪಿ ಎಂದಿಗೂ ಮಹಿಳಾ ಮೀಸಲಾತಿಗಾಗಿ ಒತ್ತಾಯಿಸಿರಲಿಲ್ಲ ಎಂದು ಸಿಎಂ ನೆನಪಿಸಿದರು.
“ಪ್ರಧಾನಿ ಮೋದಿ ಹಸಿಹಸಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಚುನಾವಣೆಗಳ ದೃಷ್ಟಿಯಿಂದ ಕಾಂಗ್ರೆಸ್ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ. 2023ರಲ್ಲೇ ಅಂಗೀಕಾರವಾಗಿರುವ ಮಸೂದೆಯನ್ನು ಇದುವರೆಗೆ ಜಾರಿ ಮಾಡದೆ ಇರುವುದು ಏಕೆ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.
ಮಸೂದೆಯಿಂದ ಕ್ಷೇತ್ರ ಮರುವಿಂಗಡನೆಯನ್ನು ಬೇರ್ಪಡಿಸಿ ಮಂಡಿಸಿದ್ದರೆ ಯಾರೂ ವಿರೋಧಿಸುತ್ತಿರಲಿಲ್ಲ. ಆದರೆ ಬಿಜೆಪಿ ರಾಜಕೀಯ ಲಾಭಕ್ಕಾಗಿ ಇದನ್ನು ಬಳಸಿಕೊಳ್ಳುತ್ತಿದೆ ಎಂದು ಅವರು ಟೀಕಿಸಿದರು.
ಮಹಿಳಾ ಮೀಸಲಾತಿ ಜಾರಿಯಾಗಬೇಕಾದರೆ ಸಂವಿಧಾನ ತಿದ್ದುಪಡಿಗೆ 2/3ರಷ್ಟು ಬಹುಮತ ಹಾಗೂ ಶೇ.50ರಷ್ಟು ರಾಜ್ಯಗಳ ಒಪ್ಪಿಗೆ ಅಗತ್ಯವಿದೆ. ನಾವು ಮಹಿಳಾ ಸಬಲೀಕರಣದ ಪರವಾಗಿದ್ದೇವೆ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


