ತುಮಕೂರು: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ವಿಕಸಿತ ಭಾರತ– ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್–ಗ್ರಾಮೀಣ’ (ವಿಬಿ-–ಜಿ ರಾಮ್ ಜಿ) ಯೋಜನೆ ಬಗ್ಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅನಗತ್ಯವಾಗಿ ಅಪಪ್ರಚಾರ ಮಾಡುತ್ತಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಟೀಕಿಸಿದ್ದಾರೆ.
ಗುರುವಾರ ತುಮಕೂರಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾತ್ಮ ಗಾಂಧೀಜಿ ಅವರು ಸ್ವರಾಜ್ಯದ ಕನಸು ಕಂಡಿದ್ದರು. ಉದ್ಯೋಗ ಖಾತ್ರಿ ಯೋಜನೆಗೆ ಎರಡು ದಶಕಗಳು ಕಳೆದಿದ್ದು, ಕಾಲಕ್ಕೆ ತಕ್ಕಂತೆ ಬದಲಾವಣೆ ಅನಿವಾರ್ಯವಾಗಿದೆ. ಈ ನಿಟ್ಟಿನಲ್ಲಿ ಗಾಂಧಿ ಹೆಸರಿನ ಬದಲಿಗೆ ‘ರಾಮ್ ಜಿ’ ಹೆಸರು ಸೇರಿಸಲಾಗಿದೆ ಎಂದು ಸಮರ್ಥಿಸಿಕೊಂಡರು.
ಅನುದಾನ ಹಂಚಿಕೆ: ಈ ಹಿಂದೆ ಕೇಂದ್ರ ಸರ್ಕಾರವೇ ಈ ಯೋಜನೆಗೆ ಪೂರ್ಣ ಅನುದಾನ ನೀಡುತ್ತಿತ್ತು. ಆದರೆ ಹೊಸ ಬದಲಾವಣೆಯಂತೆ ಕೇಂದ್ರ ಶೇ.60ರಷ್ಟು ಮತ್ತು ರಾಜ್ಯ ಸರ್ಕಾರ ಶೇ.40ರಷ್ಟು ಹಣವನ್ನು ಭರಿಸಬೇಕಿದೆ. ಇದು ರಾಜ್ಯದ ಹೊಣೆಗಾರಿಕೆಯನ್ನು ಹೆಚ್ಚಿಸಲಿದೆ ಎಂದು ಅವರು ತಿಳಿಸಿದರು.
ಹೆಚ್ಚುವರಿ ಉದ್ಯೋಗ ದಿನಗಳು: ಉದ್ಯೋಗ ಖಾತರಿಯ ದಿನಗಳನ್ನು 100ರಿಂದ 125ಕ್ಕೆ ಹೆಚ್ಚಿಸಲಾಗಿದೆ. ಪಾರದರ್ಶಕತೆ ತರಲು ಯೋಜನೆಯನ್ನು ಸಂಪೂರ್ಣ ಡಿಜಿಟಲೀಕರಣಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಈ ಯೋಜನೆಯ ಮೂಲಕ ಗ್ರಾಮೀಣ ಭಾಗದಲ್ಲಿ ಶಾಶ್ವತ ಹಾಗೂ ಗುಣಮಟ್ಟದ ಆಸ್ತಿಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದವರು ಹೇಳಿದರು.
ಇನ್ನೂ, ಕಾಂಗ್ರೆಸ್ ಸರ್ಕಾರವು ಈ ಸುಧಾರಣೆಗಳನ್ನು ಒಪ್ಪಿಕೊಳ್ಳುವ ಬದಲು ಜನರಲ್ಲಿ ತಪ್ಪು ಮಾಹಿತಿಯನ್ನು ಹರಡುತ್ತಿದೆ ಎಂದು ಅವರು ದೂರಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕರಾದ ಬಿ.ಸುರೇಶ್‌ಗೌಡ, ಜಿ.ಬಿ.ಜ್ಯೋತಿಗಣೇಶ್ ಹಾಗೂ ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


