ತುಮಕೂರು: ನಗರದಲ್ಲಿ ಸಂಗ್ರಹವಾಗುವ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ ಮಾಡುವ ಚಿಂತನೆ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಶುಕ್ರವಾರ ಹೊಸದಾಗಿ ಜಿಲ್ಲಾ ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ, ನಿರ್ಮಾಣಗೊಂಡಿರುವ ತುರ್ತು ತೀವ್ರ ನಿಗಾ ಘಟಕ, 100 ಹಾಸಿಗೆ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ, 100 ಹಾಸಿಗೆಯ ಕ್ಯಾನ್ಸರ್ ಆಸ್ಪತ್ರೆ, 22 ಕೋಟಿ ವೆಚ್ಚದ ನರ್ಸಿಂಗ್ ಕಾಲೇಜು ಹಾಸ್ಟೆಲ್ ಕಟ್ಟಡ ಲೋಕಾರ್ಪಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಕಸದ ಸಮಸ್ಯೆ ನಿವಾರಿಸಲು ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕದ ಆರಂಭಿಸುವ ಅಗತ್ಯವಿದೆ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಬೇಡಿಕೆಗೆ ಸ್ಪಂದಿಸಿದ ಸಚಿವರು, ಬೆಂಗಳೂರು ನಗರಾಭಿವೃದ್ಧಿ ಸಚಿವನಾಗಿದ್ದ ಸಮಯದಲ್ಲಿ ಬಿಡದಿ ಬಳಿ ಕಸದಿಂದ ವಿದ್ಯುತ್ ಉತ್ಪಾದಿಸುವ ಘಟಕ ನಿರ್ಮಾಣ ಮಾಡಿಸಿದ್ದ. ನಗರದಲ್ಲೂ ಕಸದ ಸಮಸ್ಯೆ ಗಮನಕ್ಕೆ ಬಂದಿದ್ದು, ವಿದ್ಯುತ್ ಘಟಕ ನಿರ್ಮಾಣ ಮಾಡುವ ಪ್ರಯತ್ನ ನಡೆದಿದೆ ಎಂದು ತಿಳಿಸಿದರು.
ಗ್ರೇಟರ್ ಬೆಂಗಳೂರು ಮಾದರಿಯಲ್ಲಿ ಗ್ರೇಟರ್ ತುಮಕೂರು ನಗರ ನಿರ್ಮಾಣ ಮಾಡುವ ಪ್ರಯತ್ನ ನಡೆದಿದೆ. ಅದಕ್ಕೆ ಸಂಬಂಧಿಸಿದ ಪ್ರಸ್ತಾವ ಸರ್ಕಾರದ ಮುಂದಿದೆ. ಕಳೆದ ಹಲವು ದಶಕಗಳಿಂದ ನಗರದಲ್ಲಿ ಬಡವರಿಗೆ ನಿವೇಶನ ವಿತರಿಸಲು ಸಾಧ್ಯವಾಗಿಲ್ಲ. ಮುಂದಿನ ಆರು ತಿಂಗಳಲ್ಲಿ 2 ಸಾವಿರ ನಿವೇಶನಗಳನ್ನು ವಿತರಿಸಲಾಗುವುದು ಎಂದು ಭರವಸೆ ನೀಡಿದರು.
ಬೈಪಾಸ್ ರಸ್ತೆ: ನಂದಿಹಳ್ಳಿ- ಮಲ್ಲಸಂದ್ರ ವಸಂತನರಸಾಪುರ ಮಧ್ಯೆ ಬೈಪಾಸ್ ರಸ್ತೆ ನಿರ್ಮಾಣಕ್ಕೆ ಕೆಲವರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಭಿವೃದ್ಧಿ ದೃಷ್ಟಿಯಿಂದ ಈ ರಸ್ತೆ ನಿರ್ಮಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಈ ಸಂದರ್ಭದಲ್ಲಿ ಸಚಿವ ಡಾ.ಎಂ.ಸಿ.ಸುಧಾಕರ್, ಪ್ರಮುಖರಾದ ಟಿ.ಬಿ.ಜಯಚಂದ್ರ, ಎಚ್.ಎಂ.ರೇವಣ್ಣ, ಬಿ.ಸುರೇಶ್ ಗೌಡ, ಸಿ.ಬಿ.ಸುರೇಶ್‌ಬಾಬು, ಎಚ್.ವಿ.ವೆಂಕಟೇಶ್, ಚಂದ್ರಶೇಖರ್‌ಗೌಡ, ವಿಕೇತ್ ರಾಜ್, ಮಹೇಶ್, ದೀಪ ಚೋಳನ್, ಶುಭ ಕಲ್ಯಾಣ್, ಜಿ.ಪ್ರಭು, ಬಿ.ವಿ.ಅಶ್ವಜ, ಕೆ.ವಿ.ಅಶೋಕ್, ಡಾ.ಚಂದ್ರಶೇಖರ್, ಡಾ.ಅಸ್ಟರ್ ಬೇಶ್ ಇತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


