ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಬಿಡುಗಡೆ ಮಾಡಲಾದ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೋ ಹಿಂದೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕೈವಾಡವಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಗಂಭೀರ ಆರೋಪ ಮಾಡಿದ್ದಾರೆ.
ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸರಣಿ ಪೋಸ್ಟ್ ಮಾಡಿರುವ ಕೃಷ್ಣ ಬೈರೇಗೌಡ, ಈ ಸ್ಟಿಂಗ್ ವಿಡಿಯೋ ಬಿಡುಗಡೆಯ ಸಂಪೂರ್ಣ ಸಂಚು ದೆಹಲಿಯಲ್ಲಿರುವ ಕೇಂದ್ರ ಸಚಿವರ ಅಧಿಕೃತ ನಿವಾಸದಲ್ಲೇ ನಡೆದಿದೆ ಎಂದಿದ್ದಾರೆ. ಕುಮಾರಸ್ವಾಮಿ ಅವರ ಸೋಶಿಯಲ್ ಮೀಡಿಯಾ ತಂಡ ಇದರಲ್ಲಿ ನೇರವಾಗಿ ಭಾಗಿಯಾಗಿದ್ದು, ಸಿದ್ದರಾಮಯ್ಯ ಅವರ ವಿಶ್ವಾಸಾರ್ಹತೆಗೆ ಧಕ್ಕೆ ತರುವುದು ಮತ್ತು ಈ ಆಪಾದನೆಯನ್ನು ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲೆ ಹೊರಿಸಿ ‘ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ’ ಹೊಡೆಯುವುದು ಅವರ ಉದ್ದೇಶವಾಗಿತ್ತು ಎಂದು ದೂರಿದ್ದಾರೆ.
ಇನ್ನೊಂದೆಡೆ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಸ್ಟಿಂಗ್ ಆಪರೇಷನ್ ಅನ್ನು ಕುಮಾರಸ್ವಾಮಿ ಅವರೇ ಬರೆದು, ನಿರ್ದೇಶಿಸಿ, ನಿರ್ಮಿಸಿದ್ದಾರೆ ಎಂದು ಆರೋಪಿಸಿದ್ದಾರೆ. 2028ರ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಜೆಡಿಎಸ್ ನಾಯಕನೊಂದಿಗೆ ಕೆಲಸ ಮಾಡುವವರೇ ಈ ವಿಡಿಯೋ ಅಪ್ಲೋಡ್ ಮಾಡಿದ್ದಾರೆ ಎಂದು ಹೇಳಿದ್ದಾರೆ. ಕುಮಾರಸ್ವಾಮಿ ಅವರ ಆಪ್ತರಾದ ಪ್ರಜ್ವಲ್ ಪ್ರಸಾದ್, ರಿತೇಶ್ ಪಾಂಡೆ ಮತ್ತು ವಿನೋದ್ ಶರ್ಮಾ ಎಂಬುವವರು ಮೊಬೈಲ್ ಖರೀದಿಸಿ ವಿಡಿಯೋ ಅಪ್ಲೋಡ್ ಮಾಡಿದ್ದು, ಮೂವರ ನಡುವೆ ಮೂರು ದಿನಾಂಕಗಳಲ್ಲಿ 29.30 ಲಕ್ಷ ರೂ. ಹಣಕಾಸಿನ ವಹಿವಾಟು ನಡೆದಿದೆ ಎಂದಿದ್ದಾರೆ.
ವಿಡಿಯೋವನ್ನು ನವದೆಹಲಿಯ ಅಧಿಕೃತ ನಿವಾಸದಲ್ಲಿ ಅಪ್ ಲೋಡ್ ಮಾಡುವಾಗ ಕುಮಾರಸ್ವಾಮಿ ಸ್ಥಳದಲ್ಲೇ ಇದ್ದರು ಎಂದು ಪಾಂಡೆ ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ ಎಂದು ಲಕ್ಷ್ಮಣ್ ಪ್ರತಿಪಾದಿಸಿದ್ದಾರೆ. ಅಲ್ಲದೆ, 2011ರ ಅಪ್ರಾಪ್ತ ಬಾಲಕಿಗೆ ಸಂಬಂಧಿಸಿದ ಘಟನೆಯ ಕುರಿತು ಮೂಲ ವಿಡಿಯೋ ಹಾಗೂ ಇಮೇಲ್ ದಾಖಲೆಗಳಿದ್ದರೆ ಬಹಿರಂಗಪಡಿಸಲಿ ಎಂದು ಅವರು ಸವಾಲು ಹಾಕಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
