ತುಮಕೂರು: ಜಿಲ್ಲೆಯ ಪಾವಗಡ ತಾಲ್ಲೂಕಿನ ಕೋಟಗುಡ್ಡ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ ಎನ್ನಲಾದ ಹಣಕಾಸಿನ ಅಕ್ರಮಕ್ಕೆ ಸಂಬಂಧಿಸಿದಂತೆ, ಹಾಲಿ ಮತ್ತು ಮಾಜಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು (PDO) ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (CEO) ಅಶ್ವಿಜ ಅವರು ಆದೇಶ ಹೊರಡಿಸಿದ್ದಾರೆ.
ಕೋಟಗುಡ್ಡ ಗ್ರಾಮ ಪಂಚಾಯಿತಿಯ ಹಾಲಿ ಪಿಡಿಒ ಭವ್ಯ ಮತ್ತು ಮಾಜಿ ಪಿಡಿಒ ಶಿವಾನಂದ ಸಾತಿಹಾಳ ಅಮಾನತುಗೊಂಡ ಅಧಿಕಾರಿಗಳು. 15ನೇ ಹಣಕಾಸು ಯೋಜನೆಯಡಿ ವಿದ್ಯುತ್ ಬಿಲ್ ಪಾವತಿಸಲು ಮೀಸಲಿಟ್ಟಿದ್ದ ಹಣವನ್ನು ದುರ್ಬಳಕೆ ಮಾಡಿಕೊಂಡು, ಅಕ್ರಮವಾಗಿ ಸಾಮಗ್ರಿಗಳನ್ನು ಖರೀದಿ ಮಾಡಿದ ಗಂಭೀರ ದೂರು ಇವರ ಮೇಲೆ ಕೇಳಿಬಂದಿತ್ತು.
ನಿಯಮ ಬಾಹಿರವಾಗಿ ವಿದ್ಯುತ್ ಬಿಲ್ನ ಮೊತ್ತವನ್ನು ಬೇರೆ ಉದ್ದೇಶಗಳಿಗೆ ಬಳಸಿಕೊಂಡಿರುವುದು. ಪಂಚಾಯತ್ ರಾಜ್ ನಿಯಮಗಳನ್ನು ಗಾಳಿಗೆ ತೂರಿ ಸಾಮಗ್ರಿಗಳನ್ನು ಖರೀದಿಸಿರುವುದು. ಈ ಹಿಂದೆಯೇ ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟಿದೆ.
ಜಿಲ್ಲಾ ಪಂಚಾಯಿತಿ ಸಿಇಒ ಅವರು ಈ ಇಬ್ಬರೂ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಂಡಿದ್ದು, ಇಲಾಖಾ ತನಿಖೆಗೆ ಆದೇಶಿಸಿದ್ದಾರೆ. ಪಂಚಾಯಿತಿ ಆಡಳಿತದಲ್ಲಿ ಪಾರದರ್ಶಕತೆ ಕಾಪಾಡದ ಮತ್ತು ಸರ್ಕಾರದ ಅನುದಾನವನ್ನು ದುರುಪಯೋಗಪಡಿಸಿಕೊಳ್ಳುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆಯನ್ನು ಈ ಆದೇಶದ ಮೂಲಕ ನೀಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


