ತುಮಕೂರು: ಹಿರಿಯ ನಾಗರಿಕರು ಜೀವಿತಾವಧಿಯ ಕೊನೆ ಕ್ಷಣದವರೆಗೂ ನೆಮ್ಮದಿಯಿಂದ ಬದುಕುವಂತಹ ವಾತಾವರಣವನ್ನು ನಾವೆಲ್ಲರೂ ಕಲ್ಪಿಸಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಸದಸ್ಯ ಕಾರ್ಯದರ್ಶಿ ನೂರುನ್ನಿಸ ಅವರು ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಹಿರಿಯ ನಾಗರಿಕರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಬಾಲಭವನ ಸಭಾಂಗಣದಲ್ಲಿಂದು ಹಮ್ಮಿಕೊಂಡಿದ್ದ ವಿಶ್ವ ಹಿರಿಯನಾಗರಿಕರ ದಿನಾಚರಣೆ –2024 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿರಿಯ ನಾಗರಿಕರು ತಮ್ಮ ವಿಶ್ರಾಂತ ಜೀವನದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಎಂದರಲ್ಲದೆ, ತಾವು ಶ್ರಮದಿಂದ ದುಡಿದ ಸ್ಥಿರಾಸ್ತಿ, ಚರಾಸ್ತಿಗಳನ್ನು ತಾವೇ ಅನುಭವಿಸುವ ಮೂಲಕ ಸಂತಸದಿಂದ ಬದುಕಬೇಕೆಂದು ಸಲಹೆ ನೀಡಿದರು.
ಜಿಲ್ಲಾ ವಿಕಲಚೇತನರ ಹಾಗೂ ಹಿರಿಯನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ಮಾತನಾಡಿ, ಹಿರಿಯ ನಾಗರಿಕರಿಗೆ ಮಕ್ಕಳಿಂದ ತೊಂದರೆ/ಸಮಸ್ಯೆಗಳು ಉಂಟಾದಲ್ಲಿ ಸಹಾಯವಾಣಿ ಕೇಂದ್ರಕ್ಕೆ ದೂರು ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ತುಮಕೂರು ವಿಶ್ವವಿದ್ಯಾನಿಲಯದ ಸಮಾಜಕಾರ್ಯ ವಿಭಾಗ ಮುಖ್ಯಸ್ಥ ಪ್ರೊ.ರಮೇಶ್ ಹಿರಿಯ ನಾಗರಿಕರ ಕಾಯ್ದೆ ಬಗ್ಗೆ ವಿಶೇಷ ಉಪನ್ಯಾಸ ನೀಡಿದರು.
ಜಿಲ್ಲೆಯ ಊರುಕೆರೆ ಅಂಚೆ ಭೋವಿಪಾಳ್ಯದ ಶತಾಯುಷಿ ಚನ್ನಬಸವಯ್ಯ ಗುಬ್ಬಿ ಬಿನ್ ಸಿದ್ದರಾಮಯ್ಯ (101 ವರ್ಷ) ಅವರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ ಹಿರಿಯ ನಾಗರಿಕರನ್ನು ಸನ್ಮಾನಿಸಲಾಯಿತು. ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎನ್. ಚೇತನ್ ಕುಮಾರ್, ಜಿಲ್ಲಾ ನಿವೃತ್ತ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಾ.ಹ. ರಮಾಕುಮಾರಿ, ಸಿಬ್ಬಂದಿವರ್ಗ, ಹಿರಿಯ ನಾಗರಿಕರು, ಪ್ರತಿನಿಧಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296