ಕಲಬುರಗಿ: ಭಾರೀ ಮಳೆಯಿಂದಾಗಿ ಬೆಳೆ ನಷ್ಟ ಸಂಭವಿಸಿದ್ದು ರೈತರ ಅನುಕೂಲಕ್ಕಾಗಿ ಬೆಳೆ ಸಾಲ ಮನ್ನಾ ಮಾಡಬೇಕೆಂಬ ಬೇಡಿಕೆಯನ್ನು ಪರಿಶೀಲಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ಸಂಭವಿಸಿರುವ ಬೆಳೆಹಾನಿಯನ್ನು ಕಂದಾಯ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಂದ ಜಂಟಿ ಸಮೀಕ್ಷೆ ನಡೆಸಲು ಆದೇಶಿಸಲಾಗಿದೆ. ವಾರದಲ್ಲಿ ಈ ಸಮೀಕ್ಷೆ ಪೂರ್ಣಗೊಂಡು ವರದಿ ಸಲ್ಲಿಕೆಯಾಗಲಿದೆ. ಆ ಬಳಿಕ ಬೆಳೆನಷ್ಟ ಪರಿಹಾರ ಪಾವತಿಸುವುದಾಗಿ ಹೇಳಿದರು.
ಈ ಬಾರಿ ಅದೃಷ್ಟವಶಾತ್ ರಾಜ್ಯದ ಹಲವು ಕಡೆ ವಾಡಿಕೆಗಿಂತ ಶೇ. 4ರಷ್ಟು ಹೆಚ್ಚು ಮಳೆಯಾಗಿದೆ. ಬೀದರ್, ಕಲಬುರಗಿ, ಯಾದಗಿರಿ ಸೇರಿ ಹಲವಾರು ಜಿಲ್ಲೆಗಳಲ್ಲಿ ಬೆಳೆನಷ್ಟ ಹೆಚ್ಚಾಗಿದೆ. ಕೂಡಲೇ ಪರಿಹಾರ ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಬೆಳೆ ನಷ್ಟದ ಬಗ್ಗೆ ಮಧ್ಯಂತರ ವರದಿ ಪಡೆದಿಲ್ಲ. ಜಂಟಿ ಸಮೀಕ್ಷೆಯ ಅಂತಿಮ ವರದಿ ಪಡೆದು, ಬಳಿಕ ಕ್ರಮ ಕೈಗೊಳ್ಳಲಾಗುವುದು. 2024-25ನೇ ಸಾಲಿಗೆ ಬೆಳೆವಿಮೆ ಯೋಜನೆಯಡಿ 656 ಕೋಟಿ ರೂ. ಪರಿಹಾರ ಪಾವತಿಸಲಾಗಿದೆ. ಇದು ಎಲ್ಲಾ ರಾಜ್ಯಗಳಿಗಿಂತಲೂ ಹೆಚ್ಚಿನ ಮೊತ್ತವಾಗಿದೆ. ಬೆಳೆ ವಿಮೆ ಯೋಜನೆಯನ್ನು ಹೊಂದಿಲ್ಲದವರಿಗೂ ಪರಿಹಾರ ಪಾವತಿಯ ಬಗ್ಗೆ ಪರಿಶೀಲಿಸುವುದಾಗಿ ಹೇಳಿದರು.
ಈ ಹಿಂದೆ ಕೇಂದ್ರ ಸರ್ಕಾರ ನಮಗೆ ಬರ ಪರಿಹಾರದ ಹಣ ನೀಡಲಿಲ್ಲ. ಸುಪ್ರೀಂಕೋರ್ಟ್‌ಗೆ ಹೋಗಿ ಹೋರಾಟದ ಮೂಲಕ ನಾವು ಪರಿಹಾರ ಪಡೆದುಕೊಂಡಿದ್ದೆವು ಎಂದರು.
ಎನ್‌ಡಿಆರ್‌ಎಫ್ ನಿಯಮಾವಳಿಗಳನ್ನು ಬದಲಾವಣೆ ಮಾಡಿ ಪ್ರಕೃತಿ ವಿಕೋಪ ನಷ್ಟ ಪರಿಹಾರವನ್ನು ಹೆಚ್ಚಿಸಬೇಕೆಂದು ಹಲವಾರು ಬಾರಿ ಪ್ರಧಾನಮಂತ್ರಿ ನರೇಂದ್ರಮೋದಿ, ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾಸೀತಾರಾಮನ್ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದೇನೆ. ಆದರೆ ಕೇಂದ್ರದಿಂದ ಯಾವುದೇ ಸ್ಪಂದನೆ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC