ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜೂನ್ 3ರ ಬುಧವಾರದಂದು ವಿಧಾನಸೌಧದ ಸುತ್ತಮುತ್ತಲಿನ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನದ ರಜೆ ಘೋಷಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (DPAR) ರಾಜ್ಯಪಾಲರ ಹೆಸರಿನಲ್ಲಿ ಈ ಅಧಿಕೃತ ಸೂಚನೆಯನ್ನು ಹೊರಡಿಸಿದೆ. ಇದರನ್ವಯ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿಗಳ ಕಟ್ಟಡದಲ್ಲಿ (ಎಂ.ಎಸ್. ಬಿಲ್ಡಿಂಗ್) ಕಾರ್ಯನಿರ್ವಹಿಸುವ ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಬುಧವಾರ ಮಧ್ಯಾಹ್ನದಿಂದ ರಜೆ ಅನ್ವಯವಾಗಲಿದೆ.
ಜೂನ್ 3 ರಂದು ಸಂಜೆ 4:05 ಕ್ಕೆ ವಿಧಾನಸೌಧದ ಮುಂಭಾಗದ ಆವರಣದಲ್ಲಿ ಭವ್ಯ ಪ್ರಮಾಣ ವಚನ ಸ್ವೀಕಾರ ಸಮಾರಂಭ ಆಯೋಜನೆಗೊಂಡಿದೆ. ಈ ಐತಿಹಾಸಿಕ ಕ್ಷಣಕ್ಕೆ ದೇಶದ ವಿವಿಧ ರಾಜ್ಯಗಳ ಗಣ್ಯರು, ಜನಪ್ರತಿನಿಧಿಗಳು, ಪಕ್ಷದ ಮುಖಂಡರು ಹಾಗೂ ಸಹಸ್ರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಮತ್ತು ಅಭಿಮಾನಿಗಳು ಸಾಕ್ಷಿಯಾಗಲಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಭಾರಿ ಜನಸ್ತೋಮ ಸೇರುವ ಸಾಧ್ಯತೆ ಇರುವುದರಿಂದ ಭದ್ರತಾ ವ್ಯವಸ್ಥೆ, ಸೂಕ್ತ ಕಾನೂನು ಸುವ್ಯವಸ್ಥೆ ಹಾಗೂ ಸಂಚಾರ ದಟ್ಟಣೆಯನ್ನು ಸುಗಮವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಸರ್ಕಾರ ಈ ಮಹತ್ವದ ತೀರ್ಮಾನ ಕೈಗೊಂಡಿದೆ. ಮಧ್ಯಾಹ್ನದ ಬಳಿಕ ಈ ಭಾಗದಲ್ಲಿ ಸಾರ್ವಜನಿಕ ವಾಹನ ಸಂಚಾರಕ್ಕೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಬೆಂಗಳೂರು ಸಂಚಾರಿ ಪೊಲೀಸರು ಸಜ್ಜಾಗಿದ್ದಾರೆ.
ಮತ್ತೊಂದೆಡೆ, ಪ್ರಮಾಣ ವಚನ ಸ್ವೀಕಾರಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ ನೂತನ ಸಿಎಂ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಧಾವಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಹೈಕಮಾಂಡ್ ನಾಯಕರೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ.
ನೂತನ ಸಚಿವ ಸಂಪುಟದ ರಚನೆ, ಸಚಿವ ಸ್ಥಾನಗಳ ಹಂಚಿಕೆ ಹಾಗೂ ಉಪಮುಖ್ಯಮಂತ್ರಿ ಹುದ್ದೆ ಕುರಿತಾಗಿ ಅಂತಿಮ ರೂಪುರೇಷೆ ಸಿದ್ಧಪಡಿಸಲು ಹಂಗಾಮಿ ಸಿಎಂ ಸಿದ್ದರಾಮಯ್ಯ ಹಾಗೂ ಕೆ.ಸಿ. ವೇಣುಗೋಪಾಲ್ ಸೇರಿದಂತೆ ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕರು ಈ ಹೈಲೇವಲ್ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದಾರೆ. ನಾಳೆಯ ಸಮಾರಂಭದ ವೇಳೆಗೆ ಸಚಿವರ ಪಟ್ಟಿಯೂ ಅಂತಿಮಗೊಳ್ಳುವ ನಿರೀಕ್ಷೆಯಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


