ಮಧುಗಿರಿ : ತಾಲೂಕು ಮಟ್ಟದ ಅಧಿಕಾರಿಗಳು ಸರ್ಕಾರಿ ಸಿಮ್ ಕಾರ್ಡ್ಗಳನ್ನು ತಮ್ಮ ವೈಯಕ್ತಿಕ ಐಫೋನ್ ಗಳಲ್ಲಿ ಬಳಸುತ್ತಿರುವುದರಿಂದ ಸಾರ್ವಜನಿಕರು ಮಾಡುವ ಕರೆಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಆರೋಪ ಸಭೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಯಿತು. ಅಧಿಕಾರಿಗಳು ಮೊದಲು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಸಾಮರ್ಥ್ಯ ಸೌಧದಲ್ಲಿ ನಡೆದ ತಾಲೂಕು ಮಟ್ಟದ ದಲಿತ ಕುಂದುಕೊರತೆ ಸಭೆಯಲ್ಲಿ ಅಧಿಕಾರಿಗಳ ಕಾರ್ಯವೈಖರಿ ಸೇರಿದಂತೆ ಹಲವು ಜ್ವಲಂತ ಸಮಸ್ಯೆಗಳು ಪ್ರಸ್ತಾಪಗೊಂಡವು.
ದಲಿತ ಮುಖಂಡ ಹಾಗೂ ವಕೀಲ ಐಡಿಹಳ್ಳಿ ನರಸಿಂಹಮೂರ್ತಿ ಮಾತನಾಡಿ, ಅಧಿಕಾರಿಗಳು ವೈಯಕ್ತಿಕವಾಗಿ ಯಾವುದೇ ಮೊಬೈಲ್ ಬಳಸಿದರೂ ಅಭ್ಯಂತರವಿಲ್ಲ. ಆದರೆ ಸರ್ಕಾರಿ ಸಿಮ್ ಗಳನ್ನು ಐಫೋನ್ಗಳಲ್ಲಿ ಅಳವಡಿಸಿಕೊಂಡಿರುವುದರಿಂದ ಬಡವರು ಹಾಗೂ ಸಾಮಾನ್ಯ ಜನರು ಮಾಡುವ ಕರೆಗಳು ಅಧಿಕಾರಿಗಳಿಗೆ ತಲುಪುತ್ತಿಲ್ಲ ಎಂಬ ದೂರುಗಳಿವೆ. ‘ನರಿ ಕೂಗು ಗಿರಿಗೆ ಮುಟ್ಟೀತೇ’ ಎಂಬ ಗಾದೆಯಂತೆ ಜನರ ಸಮಸ್ಯೆಗಳು ಅಧಿಕಾರಿಗಳ ಗಮನಕ್ಕೆ ಬರುತ್ತಿಲ್ಲ. ಸರ್ಕಾರಿ ಸಿಮ್ಗೆ ಬರುವ ಕರೆಗಳನ್ನು ಸ್ವೀಕರಿಸಿ, ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸುವ ಮೂಲಕ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿದರು.
ದಸಂಸ ಜಿಲ್ಲಾ ಸಂಚಾಲಕ ದೊಡ್ಡೇರಿ ಕಣಿಮಯ್ಯ ಮಾತನಾಡಿ, ತಾಲೂಕಿನ ಹಲವು ಗ್ರಾಮಗಳಲ್ಲಿರುವ ಅಂಬೇಡ್ಕರ್ ಭವನಗಳು ನಿರ್ವಹಣೆಯಿಲ್ಲದೆ ಶಿಥಿಲಾವಸ್ಥೆಗೆ ತಲುಪುತ್ತಿವೆ. ಗ್ರಾಮ ಪಂಚಾಯಿತಿಗಳಿಂದ ಸ್ವಚ್ಛತೆ ಹಾಗೂ ನಿರ್ವಹಣೆಗೆ ನಿರ್ಲಕ್ಷ್ಯ ತೋರುತ್ತಿರುವುದು ಸರಿಯಲ್ಲ. ಮಧುಗಿರಿ ಪಟ್ಟಣವು ಜಿಲ್ಲಾ ಕೇಂದ್ರದ ಮಟ್ಟದಲ್ಲಿ ಬೆಳೆಯುತ್ತಿದ್ದು, ಇಲ್ಲಿರುವ ಅಂಬೇಡ್ಕರ್ ಭವನ ಅತ್ಯಂತ ಚಿಕ್ಕದಾಗಿದೆ. ಆದ್ದರಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಸುಸಜ್ಜಿತ ಹಾಗೂ ಬೃಹತ್ ಅಂಬೇಡ್ಕರ್ ಭವನ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ತಾಲೂಕಿನ ಹಲವು ಗ್ರಾಮಗಳಲ್ಲಿ ದಶಕಗಳಿಂದ ರುದ್ರಭೂಮಿ ಸಮಸ್ಯೆ ಬಗೆಹರಿದಿಲ್ಲ. ರುದ್ರಭೂಮಿಗೆ ಜಮೀನು ಮಂಜೂರಾಗಿರುವ ಕಡೆಗಳಲ್ಲಿ ಸೂಕ್ತ ಭದ್ರತೆ ಇಲ್ಲದಿದ್ದರೆ, ಇನ್ನೂ ಜಾಗವೇ ಇಲ್ಲದ ಗ್ರಾಮಗಳಿಗೆ ರುದ್ರಭೂಮಿಗಾಗಿ ಜಮೀನು ಮಂಜೂರು ಮಾಡಬೇಕು ಎಂಬ ಒತ್ತಾಯವೂ ಸಭೆಯಲ್ಲಿ ಕೇಳಿಬಂತು.
ಚರಂಡಿಯಿಲ್ಲದೆ ತಿಪ್ಪಾಪುರ ದಲಿತ ಕಾಲೋನಿ ಜನರ ಪರದಾಟ : ಮೈಲಾರಪ್ಪ
ಶೋಷಿತರ ಭೂಮಿ ಹಕ್ಕು ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಮೈಲಾರಪ್ಪ ಮಾತನಾಡಿ, ತಿಪ್ಪಾಪುರ ಗ್ರಾಮದಲ್ಲಿ ದಶಕಗಳಿಂದ ಸಿಸಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಇಲ್ಲದೆ ದಲಿತ ಕಾಲೋನಿ ನಿವಾಸಿಗಳು ಅನೈರ್ಮಲ್ಯದ ವಾತಾವರಣದಲ್ಲಿ ಬದುಕುವಂತಾಗಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಜನರ ಸಮಸ್ಯೆಗಳನ್ನು ನಿರ್ಲಕ್ಷಿಸುವುದು ಸರಿಯಲ್ಲ. ಇನ್ನಾದರೂ ಗ್ರಾಮಕ್ಕೆ ಗುಣಮಟ್ಟದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸದಿದ್ದರೆ ತಾಲೂಕು ಆಡಳಿತ ಸೌಧದ ಮುಂದೆ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಬದುಕು ಕಸಿಯುವ ಬಾರು ಬೇಡ ; ಶಿಕ್ಷಣ, ಆರೋಗ್ಯಕ್ಕೆ ಆದ್ಯತೆ ನೀಡಿ
ಮಧುಗಿರಿ ಹಿಂದುಳಿದ ತಾಲೂಕಾಗಿದ್ದು, ಪಟ್ಟಣದಲ್ಲಿ ಈಗಾಗಲೇ 11 ಮದ್ಯದಂಗಡಿಗಳಿವೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೆ ಎರಡು ಮದ್ಯದಂಗಡಿಗಳನ್ನು ತೆರೆಯಲು ಅಬಕಾರಿ ಇಲಾಖೆ ಮುಂದಾಗಿರುವುದು ಸರಿಯಲ್ಲ. ಯುವಜನತೆಗೆ ಶಿಕ್ಷಣ ಮತ್ತು ಆರೋಗ್ಯದ ಸೌಲಭ್ಯಗಳು ಅಗತ್ಯವೇ ಹೊರತು ಮತ್ತಷ್ಟು ಮದ್ಯದಂಗಡಿಗಳಲ್ಲ. ಆದ್ದರಿಂದ ಹೊಸದಾಗಿ ಮದ್ಯದಂಗಡಿಗಳನ್ನು ತೆರೆಯಲು ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಎಂದು ಸಾರ್ವಜನಿಕರು, ದಲಿತ ಹಾಗೂ ಕನ್ನಡಪರ ಸಂಘಟನೆಗಳ ಮುಖಂಡರು ಮನವಿ ಸಲ್ಲಿಸಿ ಒತ್ತಾಯಿಸಿದರು.
ಸಭೆಯಲ್ಲಿ ತಹಶೀಲ್ದಾರ್ ನಂದಿನಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉತ್ತಮ್, ಪಿಎಸ್ ಐ ಚಂದ್ರಶೇಖರ್, ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ದಲಿತಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
