ಚಿಕ್ಕನಾಯಕನಹಳ್ಳಿ: ರಾಜ್ಯದಲ್ಲೇ ಹಿಂದೂ–ಮುಸ್ಲಿಂ ಭಾವೈಕ್ಯತೆಗೆ ಹೆಸರುವಾಸಿಯಾಗಿರುವ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಆರಾಧ್ಯ ದೈವ ಶ್ರೀ ತಾತಯ್ಯನವರ ಉರುಸ್ ಜಾತ್ರೆಯನ್ನು ಈ ಬಾರಿ 2027ರ ಜನವರಿ 11, 12 ಮತ್ತು 13ರಂದು ಮೂರು ದಿನಗಳ ಕಾಲ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಶಾಸಕ ಸಿ.ಬಿ.ಸುರೇಶ್ ಬಾಬು ತಿಳಿಸಿದರು.
ಪಟ್ಟಣದ ತಾತಯ್ಯನ ಘೋರಿ ಆವರಣದಲ್ಲಿ ನಡೆದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ವರ್ಷ ಫೆಬ್ರವರಿ ಅಥವಾ ಮಾರ್ಚ್ ತಿಂಗಳಲ್ಲಿ ಜಾತ್ರೆಯನ್ನು ಆಚರಿಸಲಾಗುತ್ತಿತ್ತು. ಆದರೆ ಈ ಅವಧಿಯಲ್ಲಿ ರಂಜಾನ್ ಹಬ್ಬದ ಜೊತೆಗೆ ಎಸ್ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳು ನಡೆಯುವುದರಿಂದ ಭಕ್ತರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಜಾತ್ರೆಯಲ್ಲಿ ಪಾಲ್ಗೊಳ್ಳಲು ತೊಂದರೆಯಾಗುತ್ತಿತ್ತು ಎಂದರು.
ಈ ಹಿನ್ನೆಲೆಯಲ್ಲಿ ಎಲ್ಲ ಭಕ್ತರಿಗೂ ಅನುಕೂಲವಾಗುವಂತೆ ಐದು ಮಸೀದಿಗಳ ಮುಖಂಡರು, ಶ್ರೀ ತಾತಯ್ಯ ಘೋರಿ ಕಮಿಟಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳೊಂದಿಗೆ ಚರ್ಚಿಸಿ, 2027ರ ಜನವರಿ 11ರ ಸೋಮವಾರ, 12ರ ಮಂಗಳವಾರ ಹಾಗೂ 13ರ ಬುಧವಾರದಂದು ಮೂರು ದಿನಗಳ ಕಾಲ ಜಾತ್ರೆ ನಡೆಸಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಉರುಸ್ ಕಮಿಟಿ ಸದಸ್ಯ ಸಿ.ಬಿ.ರೇಣುಕಸ್ವಾಮಿ ಮಾತನಾಡಿ, ಚಿಕ್ಕನಾಯಕನಹಳ್ಳಿ ತಾಲ್ಲೂಕು ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಶ್ರೀ ತಾತಯ್ಯನವರ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಾರೆ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಅನುಕೂಲವಾಗುವ ದಿನಾಂಕವನ್ನು ನಿಗದಿಪಡಿಸಲಾಗಿದೆ. ಜಾತ್ರಾ ಮಹೋತ್ಸವದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಪುರಸಭಾ ಅಧ್ಯಕ್ಷ ಮಹಮದ್ ಖಲಂದರ್ ಮಾತನಾಡಿ, ಎಲ್ಲಾ ಧರ್ಮಗಳ ಮುಖಂಡರು ಹಾಗೂ ಸಮುದಾಯದವರ ಸಹಕಾರದೊಂದಿಗೆ ಶಾಂತಿ, ಸೌಹಾರ್ದತೆ ಮತ್ತು ಭಕ್ತಿಭಾವದಿಂದ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಆಚರಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದರು.
ಸಭೆಯಲ್ಲಿ ಉರುಸ್ ಕಮಿಟಿ ಅಧ್ಯಕ್ಷ ಹಾಗೂ ಮಾಜಿ ಪುರಸಭಾ ಅಧ್ಯಕ್ಷ ಸಿ. ಬಸವರಾಜು, ಮುಖಂಡರಾದ ನೂರುಲ್ಲಾ, ಪ್ರಕಾಶ್ ಸಿ.ಎಚ್. ಸೇರಿದಂತೆ ಕಮಿಟಿಯ ಸದಸ್ಯರು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
