ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಸಚಿವ ಮುರುಗೇಶ್ ನಿರಾಣಿಯವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆಯ ಬಳಿಕ ಬೆಂಗಳೂರಿಗೆ ಆಗಮಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಿಗಧಿಯಾಗಿರುಂತೆ ನವೆಂಬರ್ 2ರಿಂದ 4ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಅಂದಾಜು 5 ಲಕ್ಷ ಕೋಟಿ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.
ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ ಇದೊಂದು ಯಶಸ್ವಿ ಪ್ರವಾಸ ಎಂದರು.
ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇಲ್ಲಿನ ಆಹ್ಲಾದಕರ ವಾತಾವರಣ, ಉದ್ಯಮಿಗಳ ಪರವಾಗಿರುವ ಸರ್ಕಾರ, ಕೈಗಾರಿಕಾ ಸ್ನೇಹಿ ನೀತಿಗಳು, ಉದ್ಯಮಿಗಳಿಗೆ ಬೇಕಾಗಿರುವ ರಸ್ತೆಘಿ, ನೀರು, ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ರಾಜ್ಯದಲ್ಲಿ ಸಿಗುವುದರಿಂದ ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB