ತುಮಕೂರು : ನಾಡಹಬ್ಬ ತುಮಕೂರು ದಸರಾ ಉತ್ಸವವನ್ನು ಈ ಬಾರಿಯೂ ವಿಜೃಂಭಣೆಯಿಂದ ಆಚರಿಸುವ ಮೂಲಕ ಜಿಲ್ಲೆಯ ಕಲೆ, ಸಂಸ್ಕೃತಿ ಹಾಗೂ ಸ್ಥಳೀಯ ಪ್ರತಿಭೆಗಳಿಗೆ ರಾಜ್ಯ ಮಟ್ಟದಲ್ಲಿ ಗುರುತಿನ ವೇದಿಕೆ ಕಲ್ಪಿಸಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದಸರಾ ಉತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ವರ್ಷದಂತೆ ಈ ವರ್ಷವೂ ದಸರಾವನ್ನು ವಿಶೇಷ ಹಾಗೂ ಅರ್ಥಪೂರ್ಣವಾಗಿ ಆಚರಿಸಬೇಕು. ಉತ್ಸವದಲ್ಲಿ ಹೊಸತನ ಪರಿಚಯಿಸುವುದರ ಜೊತೆಗೆ ಯುವ ಕಲಾವಿದರು, ನೃತ್ಯ ತಂಡಗಳು ಹಾಗೂ ಸ್ಥಳೀಯ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶ ನೀಡಬೇಕು ಎಂದರು.
ದಸರಾ ಸಂದರ್ಭದಲ್ಲಿ ತುಮಕೂರು ನಗರದ ಅಮಾನಿಕೆರೆಯನ್ನು ಆಕರ್ಷಕವಾಗಿ ಅಲಂಕರಿಸಿ, ವಿದ್ಯುತ್ ದೀಪಾಲಂಕಾರ ಸೇರಿದಂತೆ ವಿವಿಧ ಅಲಂಕಾರಗಳಿಂದ ಕಂಗೊಳಿಸುವಂತೆ ಮಾಡಬೇಕು. ಅಮಾನಿಕೆರೆಯನ್ನು ದಸರಾ ಉತ್ಸವದ ಪ್ರಮುಖ ಆಕರ್ಷಣೆಯನ್ನಾಗಿ ರೂಪಿಸಿ ಸಾರ್ವಜನಿಕರನ್ನು ಸೆಳೆಯಬೇಕು ಎಂದು ಸೂಚಿಸಿದರು.
ನಗರದ ಪ್ರಮುಖ ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿಯೂ ವಿದ್ಯುತ್ ದೀಪಾಲಂಕಾರ ಮಾಡುವ ಮೂಲಕ ಇಡೀ ನಗರ ಹಬ್ಬದ ವಾತಾವರಣದಿಂದ ಕಂಗೊಳಿಸುವಂತೆ ಕ್ರಮ ಕೈಗೊಳ್ಳಬೇಕು ಎಂದರು.
ದಸರಾ ಉತ್ಸವ ಕೇವಲ ಮನರಂಜನೆಗೆ ಸೀಮಿತವಾಗದೆ ಮಕ್ಕಳ, ಯುವಜನರ ಹಾಗೂ ಸ್ಥಳೀಯ ಕಲಾವಿದರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಬೇಕು. ತುಮಕೂರು ದಸರಾವನ್ನು ‘ಊರ ಹಬ್ಬ’ದ ರೀತಿಯಲ್ಲಿ ಎಲ್ಲರನ್ನೂ ಒಳಗೊಂಡು ಯಶಸ್ವಿಯಾಗಿ ಆಚರಿಸಬೇಕು ಎಂದು ಹೇಳಿದರು.
ಅಕ್ಟೋಬರ್ 11ರಿಂದ 21 ರವರೆಗೆ ತುಮಕೂರು ದಸರಾ ಉತ್ಸವ ಆಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದ್ದು, ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ವಿ. ಅಶ್ವಿಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ ಸೇರಿದಂತೆ ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಮಂಜುಸ್ವಾಮಿ ಎಂ.ಎನ್.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI
